ADVERTISEMENT

ಕಾಂಗ್ರೆಸ್‌ನ ಕುರ್ಚಿ ಗುದ್ದಾಟದಲ್ಲಿ ಅನಾಥರಾದ ರಾಜ್ಯದ ರೈತರು: ಆರ್. ಅಶೋಕ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2024, 7:54 IST
Last Updated 20 ಅಕ್ಟೋಬರ್ 2024, 7:54 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: ‘ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು’ ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ರೈತರು ಇಂತಹ ಪರಿಸ್ಥಿತಿ ಎದುರಿಸುತ್ತಿದ್ದರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರ ಸಂಕಷ್ಟದ ಬಗ್ಗೆ ಚಕಾರ ಎತ್ತಿಲ್ಲ. ರೈತರ ಜಮೀನುಗಳಿಗೆ ಹೋಗಿ ಧೈರ್ಯ ಹೇಳಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರುಗಳು, ಶಾಸಕರು ಈವರೆಗೂ ಆಕಡೆ ತಲೆ ಹಾಕಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ADVERTISEMENT

‘ಮುಖ್ಯಮಂತ್ರಿಗಳಿಗೆ ಕುರ್ಚಿ ಉಳಿಸಿಕೊಳ್ಳುವ ಯೋಚನೆ ಆದರೆ, ಸಚಿವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸ್ಥಾನ ಉಳಿಸಿಕೊಳ್ಳುವ ಯೋಚನೆ. ಇನ್ನು ಶಾಸಕರಿಗೆ ಅನುದಾನದ ಚಿಂತೆ. ಒಟ್ಟಿನಲ್ಲಿ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರದಲ್ಲಿ ನಾಡಿನ ರೈತರು ದಿಕ್ಕಿಲ್ಲದ ಅನಾಥರಾಗಿದ್ದಾರೆ. ಕಳೆದ ವರ್ಷ ಬರ ಪರಿಸ್ಥಿತಿ ಇದ್ದಾಗ ಸರಿಯಾದ ಸಮಯಕ್ಕೆ ಸಮೀಕ್ಷೆ ನಡೆಸದೆ, ರಾಜಕೀಯ ಮಾಡುವುದರಲ್ಲೇ ಕಾಲಹರಣ ಮಾಡಿದ್ದ ಕಾಂಗ್ರೆಸ್‌ ಸರ್ಕಾರ, ಈಗಲೂ ಮತ್ತೆ ಅದೇ ತಪ್ಪು ಮಾಡುತ್ತಿದೆ’ ಎಂದು ಅಶೋಕ ಕಿಡಿಕಾರಿದ್ದಾರೆ.

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ 15 ತಿಂಗಳಲ್ಲಿ 1,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಇನ್ನಷ್ಟು ರೈತರು ಪ್ರಾಣ ಕಳೆದುಕೊಳ್ಳುವ ಯೋಚನೆ ಮಾಡುವ ಮುನ್ನ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಒತ್ತಾಯಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.