ADVERTISEMENT

ಒಕ್ಕಲಿಗ – ಲಿಂಗಾಯತರ ಮೀಸಲು ಕಸಿಯುತ್ತೀರೇ: ಕಾಂಗ್ರೆಸ್ಸಿಗರಿಗೆ ತೇಜಸ್ವಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 11:32 IST
Last Updated 28 ಮಾರ್ಚ್ 2023, 11:32 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ‘ನೀವು ಮತ್ತೆ ಅಧಿಕಾರಕ್ಕೆ ಬಂದರೆ ಲಿಂಗಾಯತ– ಒಕ್ಕಲಿಗರಿಗೆ ನೀಡಿರುವ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ಕೊಡುತ್ತೀರೇ’ ಎಂದು ಕಾಂಗ್ರೆಸ್‌ ನಾಯಕರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಸಂವಿಧಾನ ಬಾಹಿರವಾಗಿ ನೀಡುತ್ತಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, ಲಿಂಗಾಯತ ಮತ್ತು ಒಕ್ಕಲಿಗರಿಗೆ ನೀಡಲಾಗಿದೆ. ಇದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಇವೆರಡೂ ಸಮುದಾಯಕ್ಕೆ ನೀಡಿರುವ ಶೇ 4 ಮೀಸಲಾತಿಯನ್ನು ರದ್ದು ಮಾಡಿ ಮುಸ್ಲಿಮರಿಗೆ ಕೊಡುವುದಾಗಿ ಹೇಳಿದ್ದಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ADVERTISEMENT

ಕಾಂಗ್ರೆಸ್‌ ಪಕ್ಷಕ್ಕೆ ಒಬಿಸಿ ಸಮುದಾಯ, ಹಿಂದುಗಳ ವಿರುದ್ಧ ಸಿಟ್ಟು ಏಕೆ? ಇವರ ಬಗ್ಗೆ ನಿರ್ಲಕ್ಷ್ಯ ಧೋರಣೆ ಏಕೆ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ. ಮಂಡಲ್‌ ಆಯೋಗದ ವರದಿಯನ್ನು ಸಂಸತ್ತಿನಲ್ಲಿ ರಾಜೀವ್‌ಗಾಂಧಿ ವಿರೋಧಿಸಿದ್ದರು. ಹಿಂದುಳಿದ ವರ್ಗಗಳ ಬಗ್ಗೆ ದ್ವೇಷಕ್ಕೆ ಇದು ಇನ್ನಷ್ಟು ಪುಷ್ಟಿ ಕೊಡುತ್ತದೆ. ವಿ.ಪಿ.ಸಿಂಗ್‌ ಸರ್ಕಾರ ಮಂಡಲ್‌ ಆಯೋಗದ ಶಿಫಾರಸಿನಂತೆ ಶೇ 27 ಮೀಸಲಾತಿ ಜಾರಿಗೆ ಮುಂದಾದಾಗ ಅದಕ್ಕೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಆ ಮೂಲಕ ಅದರ ಜಾರಿಗೆ ಸಹಕರಿಸಿದೆ ಎಂದು ಹೇಳಿದರು.

ವೈದ್ಯಕೀಯ, ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಒಬಿಸಿ ಸಮುದಾಯಕ್ಕೆ ಶೇ 27 ರಷ್ಟು ಮೀಸಲಾತಿ ಬೇಡಿಕೆ ಇದ್ದರೂ ಅದನ್ನು ಮಾಡಿರಲಿಲ್ಲ. 2004 ರಿಂದ 2014 ರವವರೆಗ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಮನವಿಯನ್ನು ಏಕೆ ಪುರಸ್ಕರಿಸಲಿಲ್ಲ. ದಶಕಗಳ ಬೇಡಿಕೆಯಾದ ಇದನ್ನು ಮೋದಿ ಸರ್ಕಾರ ಈಡೇರಿಸಿ, ಹಿಂದುಳಿದ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟಿದೆ ಎಂದು ವಿಶ್ಲೇಷಿಸಿದರು.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.