ಬೆಂಗಳೂರು: ಕರ್ನಾಟಕದ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗಿರುವ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.
ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ ಈ ಆದೇಶವನ್ನು ಬುಧವಾರ ಹೊರಡಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿತ್ತು.
2021 ಅಕ್ಟೋಬರ್ 3 ರಂದು ಪಿಎಸ್‌ಐ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಡಿಬಾರ್ ಮಾಡುವ ಮುನ್ನ ಈ 52 ಜನರ ಬಳಿ ಸ್ಪಷ್ಟನೆ ಕೇಳಲಾಗಿತ್ತು. ಸ್ಪಷ್ಟನೆ ಪಡೆದ ನಂತರವೇ ಈ ಎಲ್ಲ 52 ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಡಿಜಿಪಿ (ನೇಮಕಾತಿ) ಅವರ ಆದೇಶ ಹೇಳಿದೆ.
ಡಿಬಾರ್ ಆದವರ ಪಟ್ಟಿ ಇಲ್ಲಿದೆ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.