ADVERTISEMENT

‘ಪೇಸಿಎಂ’ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2022, 10:28 IST
Last Updated 22 ಸೆಪ್ಟೆಂಬರ್ 2022, 10:28 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ವಿಧಾನಮಂಡಲ ಕಲಾಪ ನಡೆಯುತ್ತಿರುವಾಗಲೇ ‘ಪೇಸಿಎಂ– ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್‌ ಆರಂಭಿಸಿರುವ ಅಭಿಯಾನ ದೊಡ್ಡ ಸದ್ದು ಮಾಡುತ್ತಿದೆ.

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ‘ಶೇ 40ರಷ್ಟು ಕಮಿಷನ್‌’ ಸರ್ಕಾರ ಎಂಬ ಅಭಿಯಾನವನ್ನು ಕಾಂಗ್ರೆಸ್ ನಡೆಸುತ್ತಿದೆ. ಅದರ ಮುಂದುವರಿದ ಭಾಗವಾಗಿ ಈ ಅಭಿಯಾನ ನಡೆದಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳ ಗೋಡೆಗಳ ಮೇಲೆಲ್ಲ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಹೋಲುವ ಚಿತ್ರದ ಕ್ಯೂಆರ್ ಕೋಡ್‌ ಸಹಿತ ‘ಪೇಸಿಎಂ’‌ ಎಂದು ಬರೆದ ಭಿತ್ತಿಪತ್ರಗಳು ರಾರಾಜಿಸುತ್ತಿದ್ದವು. ಅದರ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನೀಡಲಾಗಿತ್ತು.

‘ಪೇಸಿಎಂ’ ಅಭಿಯಾನ ಕುರಿತು ಸರಣಿ ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಬಿಜೆಪಿಗರೇ, ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..! ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

‘ರಾಜ್ಯ ಬಿಜೆಪಿ ಸರ್ಕಾರದ ಲಂಚಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

‘ರಾಜ್ಯ ಬಿಜೆಪಿ ಸರ್ಕಾರದ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ’ ಎಂದು ಕಿಡಿಕಾರಿದ್ದಾರೆ.

‘ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಬೊಮ್ಮಾಯಿ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.