ADVERTISEMENT

ಕುವೆಂಪು ಹೋರಾಟ ಸಮಿತಿ ಪ್ರತಿಭಟನೆ; ಪಠ್ಯಪುಸ್ತಕ ವಾಪಸ್‌ಗೆ 10 ದಿನ ಗಡುವು

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನಕ್ಕೆ ಮೆರವಣಿಗೆ l ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 19:45 IST
Last Updated 18 ಜೂನ್ 2022, 19:45 IST
ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ’ ನೇತೃತ್ವದಲ್ಲಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಶನಿವಾರ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮ  – ಪ್ರಜಾವಾಣಿ ಚಿತ್ರ
ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ’ ನೇತೃತ್ವದಲ್ಲಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಶನಿವಾರ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮ – ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದ ರಾಜ್ಯದ ವಿವಿಧ ಸಮುದಾಯಗಳ ಮಠಾಧೀಶರು, ಸಾಹಿತಿಗಳು, ಹೋರಾಟಗಾರರು ಮತ್ತು ರಾಜಕೀಯ ಮುಖಂಡರು, ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವ ಪರಿಷ್ಕೃತ ‍ಪಠ್ಯಪುಸ್ತಕಗಳನ್ನು 10 ದಿನಗಳೊಳಗೆ ವಾಪಸ್‌ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದರು.

ಪರಿಷ್ಕೃತ ಪಠ್ಯಪುಸ್ತಕಗಳನ್ನು ವಿರೋಧಿಸಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ನಡೆದ ಬಹಿರಂಗ ಸಮಾವೇಶದಲ್ಲಿ ನಾಲ್ಕು ಬೇಡಿಕೆಗಳುಳ್ಳ ಹಕ್ಕೊತ್ತಾಯವನ್ನು ಅಂಗೀಕರಿಸಲಾಯಿತು. ವಿವಿಧ ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ಪರಿಷ್ಕೃತ ಪಠ್ಯಪುಸ್ತಕಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ರೂಪಿಸಿದ್ದ ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸಬೇಕು. ನಾಡಗೀತೆ, ಕನ್ನಡ ಬಾವುಟ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥ ವಿರುದ್ಧ ರಾಷ್ಟ್ರದ್ರೋಹ, ನಾಡದ್ರೋಹದ ಆರೋಪದಡಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ, ಬಂಧಿಸಬೇಕು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು’ ಎಂದು ಆಗ್ರಹಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.

ADVERTISEMENT

ತುಮಕೂರಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಚಿತ್ರದುರ್ಗದ ಸರ್ದಾರ್‌ ಸೇವಾಲಾಲ್‌ ಸ್ವಾಮೀಜಿ, ಛಲವಾದಿ ಗುರುಪೀಠದ ಬಸವ ನಾಗಿದೇವ ಸ್ವಾಮೀಜಿ, ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌, ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌, ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಎಸ್‌.ಜಿ. ಸಿದ್ದರಾಮಯ್ಯ, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ನಿರ್ಣಯಕ್ಕೆ ಸಹಿ ಮಾಡಿದರು.

ಸಭೆಯಲ್ಲಿ ನಿರ್ಣಯ ಮಂಡಿಸಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಜಿ.ಬಿ. ಪಾಟೀಲ, ‘ನಮ್ಮ ಬೇಡಿಕೆಗಳನ್ನು ಸರ್ಕಾರ ಹತ್ತು ದಿನಗಳೊಳಗೆ ಈಡೇರಿಸಬೇಕು. ತಪ್ಪಿದಲ್ಲಿ ಮುಂದಿನ ಹಂತದ ಹೋರಾಟ ಕೈಗೆತ್ತಿಕೊಳ್ಳಲಾಗುವುದು’ ಎಂದು ಪ್ರಕಟಿಸಿದರು.

ಸ್ಥಳಕ್ಕೆ ಬರಲು ಸಿಎಂ ನಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂಬುದು ಹೋರಾಟ ಸಮಿತಿಯ ಆಗ್ರಹವಾಗಿತ್ತು. ಶುಕ್ರವಾರವೇ ಪೊಲೀಸ್‌ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಈ ಕುರಿತು ಮಾಹಿತಿ ರವಾನಿಸಲಾಗಿತ್ತು. ಶನಿವಾರ ವೇದಿಕೆಯಲ್ಲಿ ಪುನರುಚ್ಛರಿಸಲಾಯಿತು.

ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಪೊಲೀಸ್‌ ಅಧಿಕಾರಿಯೊಬ್ಬರು, ‘ಪರಿಷ್ಕೃತ ಪಠ್ಯಪುಸ್ತಕಗಳನ್ನು ವಾಪಸ್‌ ಪಡೆಯಬೇಕು’ ಎಂಬ ಅಂಶ ಬೇಡಿಕೆ ಪಟ್ಟಿಯಲ್ಲಿರುವ ಕಾರಣ ಮುಖ್ಯಮಂತ್ರಿ ಸ್ಥಳಕ್ಕೆ ಬರಲು ನಿರಾಕರಿಸಿದ್ದಾರೆ ಎಂಬ ಮಾಹಿತಿಯನ್ನು ನಂಜಾವಧೂತ ಸ್ವಾಮೀಜಿಗೆ ತಿಳಿಸಿದರು. ಈ ವಿಷಯವನ್ನು ಸ್ವಾಮೀಜಿ ಪ್ರಕಟಿಸಿದರು.

ನಂತರ ಎಚ್‌.ಡಿ. ದೇವೇಗೌಡ ಅವರ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿಪತ್ರ ರವಾನಿಸುವ ತೀರ್ಮಾನ ಕೈಗೊಳ್ಳಲಾಯಿತು. ವೇದಿಕೆಯಲ್ಲಿದ್ದ ಮಠಾಧೀಶರು, ರಾಜಕೀಯ ಮುಖಂಡರು, ಸಾಹಿತಿಗಳು ಮತ್ತು ಹೋರಾಟಗಾರರು ಒಟ್ಟಾಗಿ ದೇವೇಗೌಡರಿಗೆ ಮನವಿಪತ್ರವನ್ನು ಹಸ್ತಾಂತರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಮಿತಿಯ ಗೌರವಾಧ್ಯಕ್ಷ ಸಿ.ಎಚ್‌. ಹನುಮಂತರಾಯ, ‘ಶೈಕ್ಷಣಿಕ ಕ್ಷೇತ್ರದಲ್ಲಿ ಆಗಿರುವ ಈ ಅನ್ಯಾಯವನ್ನು ಸಹಿಸಿಕೊಂಡರೆ ನಮಗೆ ನಾವೇ ಶಿಕ್ಷಿಸಿಕೊಂಡಂತೆ. ಮುಖ್ಯಮಂತ್ರಿಯವರು ತಕ್ಷಣವೇ ಸರಿಯಾದ ತೀರ್ಮಾನ ಕೈಗೊಳ್ಳಬೇಕು. ಈ ವಿಚಾರದಲ್ಲಿ ಸರ್ಕಾರ ಮೊಂಡುತನ ಪ್ರದರ್ಶಿಸಿದರೆ ಅವಘಡಗಳಿಗೆ ಕಾರಣವಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ಎಲ್‌.ಎನ್‌. ಮುಕುಂದರಾಜ್‌, ಕಾರ್ಯಾಧ್ಯಕ್ಷರಾದ ಮಾವಳ್ಳಿ ಶಂಕರ್‌, ಹ.ರಾ. ಮಹೇಶ್‌, ಪ್ರಧಾನ ಕಾರ್ಯದರ್ಶಿಗಳಾದ ಆಡಿಟರ್‌ ನಾಗರಾಜ್‌, ಕೆ.ಎಚ್‌. ಕುಮಾರ್, ಖಜಾಂಚಿ ಎಚ್‌.ಸಿ. ಉಮೇಶ್‌, ಸಂಯೋಜಕ ಮಂಜುನಾಥ ಅದ್ದೆ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

‘ಬ್ರಾಹ್ಮಣ್ಯ ಸರಿ ಇದ್ದಿದ್ದರೆ ಬಸವಣ್ಣನವರು ಲಿಂಗ ದೀಕ್ಷೆ ನೀಡುತ್ತಿದ್ದರೆ?’

ಬ್ರಾಹ್ಮಣ್ಯದಲ್ಲಿ ಸಮಾನತೆ, ಕರುಣೆ, ಪ್ರೀತಿ ಉಕ್ಕಿ ಹರಿದು ಎಲ್ಲವೂ ಸರಿ ಇದ್ದರೆ ಬಸವಣ್ಣನವರು ಏಕೆ ಬ್ರಾಹ್ಯಣ್ಯವನ್ನು ಧಿಕ್ಕರಿಸಿ ಎಲ್ಲರಿಗೂ ಲಿಂಗದೀಕ್ಷೆ ನೀಡುತ್ತಿದ್ದರು ಎಂದು ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಪೀಠದ ನಂಜಾವಧೂತ ಸ್ವಾಮೀಜಿ ಪ್ರಶ್ನಿಸಿದರು.

‘ಪಠ್ಯಪುಸ್ತಕಗಳಲ್ಲಿನ ತಪ್ಪು ಸರಿಪಡಿಸಲು ಶಿಕ್ಷಣ ಸಚಿವರಿಗೆ ನಿರ್ದೇಶನ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದರೆ ಸಚಿವ ನಾಗೇಶ್ ಪರಿಷ್ಕೃತ ಪಠ್ಯಪುಸ್ತಕಗಳ ವಿತರಣೆಗೆ ಆದೇಶ ಹೊರಡಿಸಿದ್ದಾರೆ. ಇಂತಹ ನಡೆಯನ್ನು ಒಪ್ಪಿಕೊಂಡರೆ ಮುಂದೆ ಒಂದು ದಿನ ಇವರು ಹೇಳಿದ್ದನ್ನೇ ಸಂವಿಧಾನ ಎಂದು ಒಪ್ಪಬೇಕಾಗಬಹುದು’ ಎಂದರು.

‘ಗೋಕಾಕ್‌ ಹೋರಾಟದ ಮಾದರಿ ಅಗತ್ಯ’

‘ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಗೋಕಾಕ್‌ ಚಳವಳಿಯ ಮಾದರಿ ಅನುಸರಿಸುವುದು ಸೂಕ್ತ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು.

ಪರಿಷ್ಕೃತ ಪಠ್ಯಪುಸ್ತಕ ಹರಿದೆಸೆದ ಡಿಕೆಶಿ

ಪರಿಷ್ಕೃತ ಪಠ್ಯ ಪುಸ್ತಕದ ಪ್ರತಿಯನ್ನು ವೇದಿಕೆಯಲ್ಲೆ ಹರಿದು ಎಸೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸುವಂತೆ ಆಗ್ರಹಿಸಿದರು.

‘ಶಾಲೆಗಳು ಆರ್‌ಎಸ್‌ಎಸ್‌ ಪಡಸಾಲೆಯಲ್ಲ’

‘ಒಂದು ಸಿದ್ಧಾಂತವನ್ನು ಹೇರುವ ಪಠ್ಯಪುಸ್ತಕಗಳನ್ನು ರೂಪಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಆರ್‌ಎಸ್‌ಎಸ್‌ ಪಡಸಾಲೆಗಳನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ. ಶೇ 3ರಷ್ಟು ಜನರು ಹೇಳಿದಂತೆ ಶೇ 97ರಷ್ಟು ಜನರು ಬದುಕಲು ಸಾಧ್ಯವಿಲ್ಲ’ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ಹಲವು ರಾಜಕೀಯ ಮುಖಂಡರು ಭಾಗಿ

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರೂ ಆಗಿರುವ ಶಾಸಕ ಸಿ.ಎನ್‌. ಬಾಲಕೃಷ್ಣ, ಶಾಸಕರಾದ ಎಂ. ಕೃಷ್ಣಪ್ಪ (ವಿಜಯನಗರ), ಸೌಮ್ಯಾ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಎಚ್‌.ಎಂ. ರಮೇಶ್‌ ಗೌಡ, ಕಾಂಗ್ರೆಸ್‌ ಮುಖಂಡ ವಿ.ಆರ್‌. ಸುದರ್ಶನ್‌ ಸೇರಿದಂತೆ ಹಲವು ರಾಜಕೀಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.