ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹94 ಕೋಟಿಗೂ ಹೆಚ್ಚು ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಇಲ್ಲಿನ ಸದಾಶಿವನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ಫ್ಲ್ಯಾಟ್ ಗಳ ಮೇಲೆ ಬುಧವಾರ ಬೆಳಿಗ್ಗೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಅಲ್ಲಿಯೇ ಇದ್ದ ಹರೀಶ್ ಅವರನ್ನು ಮಧ್ಯಾಹ್ನ ತನಿಖಾ ತಂಡ ವಶಕ್ಕೆ ಪಡೆಯಿತು. ಅಲ್ಲಿಂದ ಶಾಂತಿ ನಗರದಲ್ಲಿರುವ ಇ.ಡಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವ ಶಂಕೆ ಇದೆ. ಹರೀಶ್ ಪಾತ್ರದ ಕುರಿತು ಪ್ರಬಲ ಸಾಕ್ಷ್ಯಾಧಾರ ಸಿಕ್ಕ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.