ADVERTISEMENT

ಪರಿಷತ್‌ ಚುನಾವಣೆ: ಆಕಾಂಕ್ಷಿಗಳ ಜತೆ ಸಿದ್ದರಾಮಯ್ಯ, ಡಿಕೆಶಿ ಸಭೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2023, 15:59 IST
Last Updated 8 ಸೆಪ್ಟೆಂಬರ್ 2023, 15:59 IST
<div class="paragraphs"><p>ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್</p></div>

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್

   

(ಸಂಗ್ರಹ ಚಿತ್ರ)

ಬೆಂಗಳೂರು: 2024ರ ಜೂನ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶುಕ್ರವಾರ ಮೊದಲ ಸುತ್ತಿನ ಸಭೆ ನಡೆಸಿದರು.

ADVERTISEMENT

ಎಲ್ಲ ಆಕಾಂಕ್ಷಿಗಳ ಜತೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಮತ್ತು ಇತರ ಪ್ರಮುಖರು ಚರ್ಚಿಸಿದರು. ಸಚಿವರಾದ ರಾಮಲಿಂಗಾರೆಡ್ಡಿ, ಪ್ರಿಯಾಂಕ್‌ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಿ.ಎನ್‌. ಚಂದ್ರಪ್ಪ, ಸಲೀಂ ಅಹ್ಮದ್ ಕೂಡ ಸಭೆಯಲ್ಲಿದ್ದರು.

ಟಿಕೆಟ್‌ ಆಕಾಂಕ್ಷಿಗಳ ಸಿದ್ಧತೆ, ಅವರು ಹೊಂದಿರುವ ಬೆಂಬಲದ ಕುರಿತು ಮಾಹಿತಿ ಪಡೆದರು. ಮತದಾರರ ನೋಂದಣಿ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಿರ್ಧರಿಸಿದರು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಪುಟ್ಟಣ್ಣ ಅವರನ್ನೇ ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದೆ. ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಲು ಸಜ್ಜಾಗಿರುವ ಮರಿತಿಬ್ಬೇಗೌಡ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪರಿಗಣಿಸಲು ಒಲವು ವ್ಯಕ್ತವಾಗಿದೆ. ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಅವರನ್ನು ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಚಂದ್ರಶೇಖರ ಪಾಟೀಲ ಅವರಿಗೆ ಟಿಕೆಟ್‌ ನೀಡಲು ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್‌, ಹಿಂದಿನ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ. ದಿನೇಶ್‌, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ವಿಜಯಕುಮಾರ್‌ ಟಿಕೆಟ್‌ ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಅನುಕೂಲಕರ ಪರಿಸ್ಥಿತಿ ಇದೆ’:

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಶಿಕ್ಷಕರು ಮತ್ತು ಪದವೀಧರರು ನಾಡಿನ ಅಭಿವೃದ್ದಿ ಪರವಾಗಿ ಇದ್ದಾರೆ. ಆದ್ದರಿಂದ ಇವರೆಲ್ಲಾ ನಮ್ಮ ಪರವಾಗಿ ಇರುವುದರಿಂದ ವಿಧಾನಪರಿಷತ್‌ ಚುನಾವಣೆಯಲ್ಲಿ ಅನುಕೂಲಕರ ವಾತಾವರಣವಿದೆ’ ಎಂದರು.

‘ಟಿಕೆಟ್‌ ಆಕಾಂಕ್ಷಿಗಳು ಶಿಕ್ಷಕರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿ ನಮಗೆ ತಿಳಿಸಬೇಕು. ಟಿಕೆಟ್ ಆಕಾಂಕ್ಷಿಗಳು ಮತ್ತು ಎಲ್ಲ ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಘೋಷಿಸುತ್ತೇವೆ. ಟಿಕೆಟ್‌ ಯಾರಿಗೇ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡಿ’ ಎಂದು  ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.