ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರದಿಂದ ನಾಲ್ಕು ದಿನಗಳವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಬುಧವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಪ್ರತಿ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸುವುದರಿಂದ ಮೀನುಗಾರರು ಎಚ್ಚರ ವಹಿಸಬೇಕು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ತಲುಪುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಶುಕ್ರವಾರ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಏಳು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.