ADVERTISEMENT

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ: 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 14:43 IST
Last Updated 20 ಅಕ್ಟೋಬರ್ 2024, 14:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮಳೆ ಜೋರಾಗುವ ಸಂಭವವಿದೆ ಎಂದಿದೆ.

ಮಂಗಳವಾರವೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಸೇರಿ ಎಂಟು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಇದೇ 26ರವರೆಗೂ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.