ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ಗಾಳಿಯ ವೇಗವು 30ರಿಂದ 40 ಕಿ.ಮೀ. ತಲುಪುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯುವ ಸಂಭವವಿದೆ. ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಶುಕ್ರವಾರವೂ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯುವ ಸಂಭವವಿದೆ. ಕರಾವಳಿಯ ಮೂರು ಜಿಲ್ಲೆಗಳು ಸೇರಿ ಏಳು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.