ADVERTISEMENT

ಹಗರಣದಿಂದ ರದ್ದಾಗಿದ್ದ 545 PSI ಹುದ್ದೆಗಳ ನೇಮಕಾತಿಗೆ ಡಿ. 23 ರಂದು ಮರು ಪರೀಕ್ಷೆ

ಡಿಸೆಂಬರ್ 23 ರಂದು ಮರು ಲಿಖಿತ ಪರೀಕ್ಷೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2023, 10:13 IST
Last Updated 22 ನವೆಂಬರ್ 2023, 10:13 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಹಗರಣದಿಂದ ರದ್ದಾಗಿದ್ದ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (PSI) ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿರ್ಧರಿಸಿದೆ.

ಇದೇ ಡಿಸೆಂಬರ್ 23 ರಂದು ಮರು ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳು ಇರಲಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಜಾವಾಣಿಗೆ ತಿಳಿಸಿದ್ದಾರೆ.

ADVERTISEMENT

ರಾಜ್ಯ ಪೊಲೀಸ್ ಇಲಾಖೆ ಈ ಹಿಂದೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನಡೆಸಿದ್ದ ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು‌ ಲಿಖಿತ ಪರೀಕ್ಷೆಗೆ ಅರ್ಹರು ಎಂದು ಎಸ್.ರಮ್ಯಾ ತಿಳಿಸಿದ್ದಾರೆ.

ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ನವೆಂಬರ್ 10ರಂದು ನೀಡಿದ್ದ ತೀರ್ಪಿನ ಅನ್ವಯ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೊದಲು ಸುಮಾರು 54 ಸಾವಿರ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.

545 ಹುದ್ದೆಗಳ ನೇಮಕಾತಿಗೆ ಈ ಮೊದಲು 2021ರ ಜನವರಿ 21ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಸಿದ್ದ 1,42,636 ಅಭ್ಯರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹರಾದ 54,104 ಅಭ್ಯರ್ಥಿಗಳಿಗೆ 2021 ಅ. 3ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು.

2022ರ ಜ. 19ರಂದು ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ನೀಡಿದ್ದ ಮಧ್ಯಂತರ ವರದಿ ಆಧರಿಸಿ ಸರ್ಕಾರವು, 2021 ಅ. 3ರಂದು ನಡೆಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಿ, ಹೊಸತಾಗಿ ಪರೀಕ್ಷೆ ನಡೆಸಲು 2022 ಏ‍ಪ್ರಿಲ್ 29ರಂದು ಆದೇಶ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ಕೆಲವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಕೆಎಟಿ, 2022ರ ಜುಲೈ 19 ಮತ್ತು ಡಿ. 14ರಂದು ವಜಾಗೊಳಿಸಿತ್ತು. ಕೆಎಟಿ ಆದೇಶದ ವಿರುದ್ಧ ಅಭ್ಯರ್ಥಿಗಳು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್‌, ಲಿಖಿತ ಪರೀಕ್ಷೆಯನ್ನು ರದ್ದುಪಡಿಸಿ  ಹೊಸದಾಗಿ ಪರೀಕ್ಷೆ ನಡೆಸಲು ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.