ADVERTISEMENT

ಭವಾನಿಗೆ ನಿರೀಕ್ಷಣಾ ಜಾಮೀನು: ರಾಜ್ಯ ಸರ್ಕಾರದ ಅರ್ಜಿ ವಜಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಅಕ್ಟೋಬರ್ 2024, 6:33 IST
Last Updated 18 ಅಕ್ಟೋಬರ್ 2024, 6:33 IST
<div class="paragraphs"><p>ಭವಾನಿ ರೇವಣ್ಣ</p></div>

ಭವಾನಿ ರೇವಣ್ಣ

   

ನವದೆಹಲಿ: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. 

ಭವಾನಿ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ವಿಶೇಷ ತನಿಖಾ ದಳ (ಎಸ್‌ಐಟಿ) ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ನ್ಯಾಯಪೀಠವು ಭವಾನಿ ಅವರಿಗೆ ನೋಟಿಸ್‌ ನೀಡಿತ್ತು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಉಜ್ಜಲ್‌ ಭುಯಾನ್ ಅವರಿದ್ದ ಪೀಠವು, ‘ರಾಜಕೀಯದಲ್ಲಿರುವ ವ್ಯಕ್ತಿಗಳು ಕೆಲವೊಮ್ಮೆ ಇಂತಹ ಪ್ರಕರಣಗಳಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಮಗನ ಅಪರಾಧಗಳಿಗೆ ಕುಮ್ಮಕ್ಕು ನೀಡಿದ ಆರೋಪ ಪ್ರತಿವಾದಿ ಮೇಲಿದೆ. ಈ ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಹೀಗಾಗಿ, ನಿರೀಕ್ಷಣಾ ಜಾಮೀನು ರದ್ದುಪಡಿಸುವ ಅಗತ್ಯ ಇಲ್ಲ’ ಎಂದು ಅಭಿಪ್ರಾಯಪಟ್ಟಿತು.   

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿತ್ತು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಕೇಳಿ ಬಂದ ಕಾರಣ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಇದನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್‌ ಮೊರೆ ಹೋಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.