ಬೆಂಗಳೂರು: ‘ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಐದನೇ ತಿಂಗಳಿಗೆ ಕಾಲಿಡುತ್ತಿದೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿ ನಮ್ಮೊಂದಿಗೆ ಮಾತುಕತೆಗೆ ಬಂದಿಲ್ಲ. ಇದು ಅವರ ರೈತ ವಿರೋಧಿ ನಿಲುವಿಗೆ ಸಾಕ್ಷಿ. ಅವರಿಗೆ ತಕ್ಕ ಪಾಠ ಕಲಿಸಬೇಕು. ಇದಕ್ಕಾಗಿ ಪಶ್ಚಿಮ ಬಂಗಾಳ ಮತ್ತು ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಕರೆ ನೀಡಿದ್ದೇವೆ’ ಎಂದು ರಾಷ್ಟ್ರೀಯ ಕಿಸಾನ್ ಮಹಾ ಸಂಘದ ಪ್ರಧಾನ ಸಂಚಾಲಕ ಶಿವಕುಮಾರ್ ಕಕ್ಕಾಜಿ ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಷ್ಟ್ರೀಯ ಕಿಸಾನ್ ಸಂಘಟನೆ ಶುಕ್ರವಾರ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಕೇಂದ್ರದ ರೈತ ವಿರೋಧಿ ನಿಲುವನ್ನು ಖಂಡಿಸಿ ಇದೇ 26ರಂದು ಭಾರತ ಬಂದ್ ನಡೆಸಲಾಗುತ್ತಿದೆ. ಇದಕ್ಕೆ ಎಲ್ಲಾ ರಾಜ್ಯಗಳ ರೈತ, ಕಾರ್ಮಿಕ ಹಾಗೂ ಇತರ ಸಂಘಟನೆಗಳು ಸಹಕಾರ ನೀಡಬೇಕು’ ಎಂದರು.
‘ಪಶ್ಚಿಮ ಬಂಗಾಳ ಮತ್ತು ಕೇರಳ ಪ್ರವಾಸ ಕೈಗೊಂಡು ಅಲ್ಲಿನ ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಎಂಟು ರಾಜ್ಯಗಳಲ್ಲಿ ಕಿಸಾನ್ ಮಹಾ ಪಂಚಾಯಿತಿ ನಡೆಸಲಾಗಿದೆ. ಇತರ ರಾಜ್ಯಗಳಿಗೂ ಇದನ್ನು ವಿಸ್ತರಿಸಲಾಗುತ್ತದೆ. ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ’ ಎಂದು ತಿಳಿಸಿದರು.
ಕುರುಬೂರು ಶಾಂತಕುಮಾರ್ ‘ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಿಸಾನ್ ಮಹಾ ಪಂಚಾಯಿತಿ ನಡೆಸಲು ತೀರ್ಮಾನಿಸಲಾಗಿದೆ’ ಎಂದರು.
‘ಪಶ್ಚಿಮ ಬಂಗಾಳದಲ್ಲಿ ಅನೇಕ ಮಹಾ ಪಂಚಾಯಿತಿಗಳನ್ನು ನಡೆಸಿದ್ದು ಇದಕ್ಕೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕದಿರಲು ಅಲ್ಲಿನ ರೈತರು ನಿರ್ಧರಿಸಿದ್ದಾರೆ’ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಮಹಾ ಸಂಘದ ಯುವ ಘಟಕದ ಅಧ್ಯಕ್ಷ ಅಭಿಮನ್ಯು ಕೊಹರಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.