ಬೆಂಗಳೂರು: ಹೈಕೋರ್ಟ್‌ನ ಹಿರಿಯ ವಕೀಲ ಕೆ.ಎಂ. ನಟರಾಜ್ ಅವರನ್ನು ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಆಗಿ ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಇದೇ 14ರಂದು ಆದೇಶ ಹೊರಡಿಸಿದೆ. ನಟರಾಜ್ ಸದ್ಯ ದಕ್ಷಿಣ ವಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
1989ರ ಡಿಸೆಂಬರ್‌ನಿಂದ 1990ರ ನವೆಂಬರ್‌ವರೆಗೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಸುಪ್ರೀಂಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಎರಡು ದಶಕಗಳಿಗೂ ಹೆಚ್ಚಿನ ಸಮಯದ ನಂತರ ಈ ಹುದ್ದೆಗೆ ಕರ್ನಾಟಕದ ಹಿರಿಯ ವಕೀಲರೊಬ್ಬರು ನೇಮಕಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಕೊನೆತೋಟ ಮಹಾಬಲೇಶ್ವರ ನಟರಾಜ್ ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಿಂದ ಪದವಿ ಪಡೆದು 1992ರಲ್ಲಿ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರ ಬಳಿ ವೃತ್ತಿ ಆರಂಭಿಸಿದರು.
2009ರಿಂದ 2013ರವರೆಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ಹೈಕೋರ್ಟ್‌ನ ಹಿರಿಯ ವಕೀಲರಾಗಿ ನಿಯುಕ್ತಿಗೊಂಡಿದ್ದರು. 2016ರ ಏಪ್ರಿಲ್ 8ರಂದು ದಕ್ಷಿಣ ವಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.