ADVERTISEMENT

ಬಿಜೆಪಿ ಸರ್ಕಾರ ರಕ್ಷಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮಾರ್ಚ್ 2023, 10:34 IST
Last Updated 15 ಮಾರ್ಚ್ 2023, 10:34 IST
ಪ್ರವೀಣ್ ಸೂದ್ ಮತ್ತು ಡಿ.ಕೆ.ಶಿವಕುಮಾರ್
ಪ್ರವೀಣ್ ಸೂದ್ ಮತ್ತು ಡಿ.ಕೆ.ಶಿವಕುಮಾರ್   

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ.

‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.

ADVERTISEMENT

‘ಪ್ರವೀಣ್ ಸೂದ್ ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್‌ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಡಿಕೆಶಿ ತಿಳಿಸಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.