ಬೆಂಗಳೂರು:ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿನ (ಕೆಪಿಎಲ್) ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಸಂಬಂಧಿಸಿದಂತೆಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅಷ್ಫಾಕ್ ಅಲಿ ವಿರುದ್ಧದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಕುರಿತಂತೆ ‘ಬೆಳಗಾವಿ ಪ್ಯಾಂಥರ್ಸ್ ಮಾಲೀಕ’ ಅಲಿ ಅಶ್ಪಾಕ್ ಅಲಿಯಾಸ್ ಅಷ್ಫಾಕ್ ಹನೀಫ್ ತಾರಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಮಾನ್ಯ ಮಾಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ‘ಅಷ್ಫಾಕ್ ವಿರುದ್ಧ ಹೊರಿಸಲಾದ ಆರೋಪಗಳು ಆಧಾರರಹಿತವಾಗಿವೆ. ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿಸಿಸಿಬಿ ಪೊಲೀಸರು ವಿಫಲವಾಗಿದ್ದಾರೆ. ಅಂತೆಯೇ ಇಂತಹ ಆರೋಪಗಳಿಗೆ ಸಂಬಂಧಿಸಿದಂತೆ ಈತನಕ ಯಾವುದೇ ಕಾನೂನುಗಳೇ ಇನ್ನೂ ರಚನೆಯಾಗಿಲ್ಲ. ಆದ್ದರಿಂದ, ಈ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಬೇಕು’ ಎಂದು ಕೋರಿದ್ದರು.
ಈ ಕೋರಿಕೆಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿದೆ. ಇದೇ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದುಕೋರಿದ್ದ ಅಮಿತ್ ಮಾವಿ, ಅಬ್ರಾರ್ ಖಾಜಿ ಹಾಗೂ ಸಿ.ಎಂ.ಗೌತಮ್ ಅವರ ಮೇಲಿನ ಪ್ರತ್ಯೇಕ ಅರ್ಜಿಗಳನ್ನೂ ನ್ಯಾಯಪೀಠ ಮಾನ್ಯ ಮಾಡಿದೆ.
ಪ್ರಕರಣವೇನು?: 2019ರಲ್ಲಿ ನಡೆದ ಬಳ್ಳಾರಿ ಟಸ್ಗರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ತಂಡಗಳ ನಡುವಿನ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಬೆಟ್ಟಿಂಗ್ ನಡೆಸಲಾದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಸಲಾಗಿತ್ತು. ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಭಾರತೀಯ ದಂಡ ಸಂಹಿತೆ–1860ರ ಕಲಂ 420, 120–ಬಿ ಅಡಿಯಲ್ಲಿ ತನಿಖೆ ನಡೆಸಿದ್ದರು. 2020ರ ಫೆಬ್ರುವರಿ 5ರಂದು ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.