ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, 120 ಅಡಿ ದಾಡಿದ ಕೂಡಲೇ ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುವುದು. ನದಿಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದ್ದಾರೆ.
ಜಲಾಶಯದ ನೀರಿನ ಮಟ್ಟ ಶುಕ್ರವಾರ ಸಂಜೆ 118 ಅಡಿ (ಗರಿಷ್ಠ ಮಟ್ಟ 124.80 ಅಡಿ) ತಲುಪಿದೆ. ಅಣೆಕಟ್ಟೆ ತುಂಬಲು 6 ಅಡಿ ಬಾಕಿ ಇದೆ.
46,658 ಕ್ಯುಸೆಕ್ ಒಳಹರಿವು ಇದ್ದು, 2,707 ಕ್ಯುಸೆಕ್ ಹೊರಹರಿವು ಇದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 49 ಟಿಎಂಸಿ ಅಡಿ, ಪ್ರಸ್ತುತ 40 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 89.90 ಅಡಿ (15.87 ಟಿಎಂಸಿ ಅಡಿ) ನೀರಿತ್ತು.
ಜಲಾಶಯದಿಂದ ಯಾವ ಕ್ಷಣದಲ್ಲಾದರೂ ಕಾವೇರಿ ನದಿಗೆ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಪಾತ್ರದ ತಗ್ಗು ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಕಾವೇರಿ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇದೇ ರೀತಿ ಒಳಹರಿವು ಮುಂದುವರಿದರೆ ಶುಕ್ರವಾರ ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ಅಣೆಕಟ್ಟೆಯಿಂದ ನೀರು ಹೊರಬಿಡುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಕೆಆರ್‌ಎಸ್‌ನಿಂದ ಒಂದು ಲಕ್ಷಕ್ಕಿಂತ ಹೆಚ್ಚಿನ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನದಿ ಪಾತ್ರದಲ್ಲಿರುವ ಶ್ರೀರಂಗಪಟ್ಟಣ ತಾಲ್ಲೂಕಿನ- 53, ಪಾಂಡವಪುರ- 15, ಮಳವಳ್ಳಿ- 21 ಹಾಗೂ ಹೇಮಾವತಿ ಜಲಾಶಯಕ್ಕೆ ಸಂಬಂಧಿಸಿದಂತೆ ಕೆ.ಆರ್.ಪೇಟೆ- 3 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಗ್ರಾಮಗಳಿಗೆ ಖುದ್ದು ಅಧಿಕಾರಿಗಳು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ (ಟಾಸ್ಕ್ ಫೋರ್ಸ್) ಸಮಿತಿ ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮಳೆ ಹಾಗೂ ನದಿಗಳಿಂದ ಯಾವುದೇ ಅಪಾಯಗಳು ಉಂಟಾದಾಗ ಕೂಡಲೇ ಕಂಟ್ರೋಲ್ ರೂಂಗೆ ಮಾಹಿತಿ ಸಲ್ಲಿಸುವುದರಿಂದ ಸಾರ್ವಜನಿಕರನ್ನು ಸಮಸ್ಯೆಯಿಂದ ಪಾರು ಮಾಡಬಹುದು ಎಂದು ತಿಳಿಸಿದ್ದಾರೆ.
ಸಾಕಷ್ಟು ಕಡೆ ತೀವ್ರ ಮಳೆ ಹಾಗೂ ನದಿ ನೀರಿನಿಂದ ರಸ್ತೆಗಳು ಜಲಾವೃತವಾದರೆ ಸಂಚಾರ ನಿರ್ಬಂಧಿಸಿ, ಪರ್ಯಾಯ ರಸ್ತೆಯ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.