ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದ್ದಾರೆ.
ಪಿಎಫ್‌ಐ ನಿಷೇಧ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಆಂತರಿಕವಾಗಿ ವಿಧ್ವಂಸಕ ಕೃತ್ಯಗಳನ್ನು ಮಾಡುವ ದೇಶದ್ರೋಹಿ ಪ್ರಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದ ಸಮಸ್ತ ದೇಶಪ್ರೇಮಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಹೇಳಿದರು.
ಸ್ವತಂತ್ರ ಹೋರಾಟಗಾರ ಭಗತ್ ಸಿಂಗ್ ಅವರ ಜಯಂತಿಯಂದು ದೇಶದ್ರೋಹಿ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಎಲ್ಲ ಸ್ವತಂತ್ರ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದೆ ಎಂದು ತಿಳಿಸಿದರು.
ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್‌ಡಬ್ಲ್ಯೂಎಫ್), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸೇರಿದಂತೆ ಎಂಟು ಸಂಘಟನೆಗಳನ್ನು ನಿಷೇಧಿಸಲಾಗಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.