ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಗಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ನೌಕರರ 6 ಸಂಘಟನೆಗಳು ಮತ್ತು 2 ಸಾರಿಗೆ ನಿಗಮಗಳನ್ನು ಹೈಕೋರ್ಟ್ ಪ್ರತಿವಾದಿಯನ್ನಾಗಿಸಿದೆ.
ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲು ಕೋರಿ ವಕೀಲ ನಟರಾಜ್ ಶರ್ಮ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸಾರಿಗೆ ನೌಕರರ ಕೂಟದ ಪರ ವಕೀಲ ಎನ್.ಪಿ. ಅಮೃತೇಶ್ ಮಧ್ಯಂತರ ಅರ್ಜಿ ಸಲ್ಲಿಸಿ, ಇತರೆ ನೌಕರ ಸಂಘಟನೆಗಳಾದ ಸಿಐಟಿಯು, ಐಎನ್‌ಟಿಯುಸಿ, ಎಐಟಿಯುಸಿ, ಬಿಎಂಎಸ್ ಟ್ರಾನ್ಸ್‌ಪೋರ್ಟ್ ವರ್ಕರ್ಸ್ ಯೂನಿಯನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮಹಾಮಂಡಳ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಬೇಕು ಎಂದು ಕೋರಿದರು.
ಮನವಿ ಪರಿಗಣಿಸಿದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು. 10 ದಿನಗಳ ಒಳಗೆ ತಿದ್ದುಪಡಿ ಅರ್ಜಿ ಸಲ್ಲಿಸುವಂತೆ ಮೂಲ ಅರ್ಜಿದಾರರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.