ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಬಹುದಾದ 1,351 ಗ್ರಾಮಗಳನ್ನು ಗುರುತಿಸಿದ್ದು, ಉಪಶಮನ ಕ್ರಮಕ್ಕಾಗಿ ₹100 ಕೋಟಿ ಮೀಸಲಿಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಸಿ.ಟಿ. ರವಿ, ಎನ್. ರವಿಕುಮಾರ್, ಛಲವಾದಿ ಟಿ. ನಾರಾಯಣಸ್ವಾಮಿ, ಪ್ರತಾಪ್‌ಸಿಂಹ ನಾಯಕ್, ಭಾರತಿ ಶೆಟ್ಟಿ, ಕೇಶವಪ್ರಸಾದ್, ಪಿ.ಎಚ್. ಪೂಜಾರ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 250 ಗ್ರಾಮ ಪಂಚಾಯಿತಿಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದರು.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭೂಕುಸಿತವಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಭಾರತ ಸರ್ಕಾರದ ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಹಾಗೂ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ (ಎನ್‌ಐಆರ್‌ಎಂ) ಸಹಯೋಗದಲ್ಲಿ ಅವರ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತದೆ. ಈ ವರ್ಷ ₹100 ಕೋಟಿ ವೆಚ್ಚ ಮಾಡಲು ನಿರ್ಧರಿಸಲಾಗಿದ್ದು, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಏಳು ಜಿಲ್ಲೆಗಳಲ್ಲಿ 601.94 ಹೆಕ್ಟೇರ್ ಕೃಷಿ ಬೆಳೆ, 104.53 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಕೇಂದ್ರ ನಿಗದಿ ಮಾಡಿರುವಂತೆ ಅರ್ಹ ಫಲಾನುಭವಿಗಳ ಖಾತೆಗೆ ಪರಿಹಾರ ಪಾವತಿಸಲಾಗುತ್ತದೆ. ಪ್ರತಿ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ₹649.75 ಕೋಟಿ ಹಾಗೂ ತಹಶೀಲ್ದಾರ್‌ಗಳ ಪಿ.ಡಿ ಖಾತೆಯಲ್ಲಿ ₹127.79 ಕೋಟಿ ಹಣವಿದೆ. ತುರ್ತು ಸಂದರ್ಭದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಸಚಿವರು ಹೇಳಿದರು.
ಭೂಕುಸಿತಕ್ಕೆ ಅನೇಕ ಕಾರಣಗಳಿದ್ದು, ಅದರಲ್ಲಿ ಎರಡು ದಿನದಲ್ಲೇ 50 ಸೆಂ.ಮೀ. ಮಳೆಯಾಗಿರುವುದು ಒಂದಾಗಿದೆ. ರಸ್ತೆ ಹಾಗೂ ಮೂಲಸೌಕರ್ಯಕ್ಕೆ ನೈಸರ್ಗಿಕ ಇಳಿಜಾರುಗಳ ಮಾರ್ಪಾಡು, ನೈಸರ್ಗಿಕ ನದಿಗಳ ತಡೆ, ಕಾಫಿ ಎಸ್ಟೇಟ್‌ಗಳಲ್ಲಿ ನಿರ್ಮಿಸಿರುವ ನೀರಿನ ಕೊಳಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಸಂಸ್ಥೆಗಳು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿಗಳನ್ನು ನಡೆಸಿರುವುದು ಭೂಕುಸಿತಕ್ಕೆ ಕಾರಣವಾಗಿದೆ. ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು ರಾಜ್ಯ ಸರ್ಕಾರದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಡೆಸಿದ ಅಧ್ಯಯನದಲ್ಲಿ ಈ ಅಂಶಗಳು ಭೂ ಕುಸಿತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.