ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಕೇಂದ್ರ ಸಹಭಾಗಿತ್ವದ ಇಲಾಖಾ ಯೋಜನೆಗಳ ಅನುಮೋದನಾ ಮಂಡಳಿ ಜೊತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಶುಕ್ರವಾರ ಚರ್ಚೆ ನಡೆಸಿದರು.
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. 2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಅಗತ್ಯ ನೆರವು ನೀಡಬೇಕು ಎಂದು ಕೋರಿದರು.
ಕೇಂದ್ರದ ಅನುದಾನ ಸಕಾಲಕ್ಕೆ ದೊರೆತರೆ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ರಾಜ್ಯದಲ್ಲಿ ಹೊಸದಾಗಿ ಆರಂಭಿಸಿದ ತಾಲ್ಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳಿಗೂ ಅನುದಾನದ ಅಗತ್ಯವಿದೆ. ಪೋಷಣ್ ಅಭಿಯಾನ, ಮಿಷನ್ ಶಕ್ತಿ, ವಾತ್ಸಲ್ಯ ಸೇರಿದಂತೆ ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವಾಲಯದ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಪ್ರಕಾಶ್, ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಎಂ.ಆರ್. ರವಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.