ADVERTISEMENT

ಸ್ಥಳೀಯ ಚುನಾವಣೆ ಮತ್ತಷ್ಟು ತಡ

ಒಬಿಸಿ ಮೀಸಲಾತಿ: ಮಾರ್ಚ್‌ 31ರವರೆಗೆ ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 20:38 IST
Last Updated 15 ಡಿಸೆಂಬರ್ 2022, 20:38 IST
   

ನವದೆಹಲಿ: ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಪ್ರಾತಿನಿಧ್ಯವನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಮಾರ್ಚ್‌ 31ರವರೆಗೆ ಸುಪ್ರೀಂ ಕೋರ್ಟ್‌ ಕಾಲಾವಕಾಶ ನೀಡಿದೆ.

ಈ ಬೆಳವಣಿಗೆಯಿಂದಾಗಿ ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಬಿಬಿಎಂಪಿ ವಾರ್ಡ್‌ಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ 33 ರಷ್ಟು ಸೀಟುಗಳನ್ನು ಮೀಸಲಿಡುವ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್‌ ಕಳೆದ ಶುಕ್ರವಾರ ನೋಟಿಸ್‌ ಜಾರಿ ಮಾಡಿತ್ತು. ನ್ಯಾಯಮೂರ್ತಿಗಳಾದ ಎಸ್‌. ಅಬ್ದುಲ್‌ ನಜೀರ್‌ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠವು ಗುರುವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ,ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ, ‘ಮೀಸಲಾತಿ ನಿಗದಿಪಡಿಸಲು ಪ್ರಾಯೋಗಿಕ ದತ್ತಾಂಶ ಸಂಗ್ರಹ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ನಡೆಸಲು ಆಯೋಗ ನೇಮಿಸಲಾಗಿದೆ’ ಎಂದರು.

ADVERTISEMENT

ಇದರಿಂದಾಗಿಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ವಕೀಲರು ಗಮನ ಸೆಳೆದರು.

ವಿಳಂಬದ ಬಗ್ಗೆ ಚುನಾವಣಾ ಆಯೋಗ ಚಿಂತಿಸಬಾರದು ಎಂದು ಮೆಹ್ತಾ ಹೇಳಿದರು. ಕರ್ನಾಟಕ ಹೈಕೋರ್ಟ್‌ನ ಆದೇಶದ ನಂತರ, ಒಬಿಸಿಗಳಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್‌ ನಿಗದಿಪಡಿಸಿದ ಟ್ರಿಪಲ್‌ ಟೆಸ್ಟ್‌ (ಮೂರು ಹಂತದ ಪರಿಶೀಲನೆ) ಮಾನದಂಡ ಅನುಸರಿಸಲು ಹೊಸ ಕಸರತ್ತು ನಡೆಸಲಾಗುತ್ತಿದೆ ಎಂದೂ ಹೇಳಿದರು.

ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ಶೇ 33ರಷ್ಟು ಒಬಿಸಿ ಕೋಟಾ ನಿಗದಿಪಡಿಸಲು ರಾಜ್ಯ ಸರ್ಕಾರ ಆಗಸ್ಟ್‌ 16ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಅಕ್ಟೋಬರ್‌ನಲ್ಲಿ ರದ್ದುಗೊಳಿಸಿತ್ತು. ಈ ಮೀಸಲು ನಿಗದಿ ನಿರ್ಧಾರವನ್ನು ಕೇವಲ ಕಾಲ್ಪನಿಕ ದತ್ತಾಂಶಗಳನ್ನು ಆಧರಿಸಿ ತೆಗೆದುಕೊಳ್ಳಲಾಗಿದೆ. ಯಾವುದೇ ವೈಜ್ಞಾನಿಕ ಪ್ರಕ್ರಿಯೆಗಳನ್ನು ನಡೆಸಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಕೆ.ಭಕ್ತವತ್ಸಲ ನೇತೃತ್ವದ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆದರೆ, ಇದು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಮೂರು ಹಂತದ ಪರಿಶೀಲನೆಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅವಧಿ 2020ರ
ಸೆಪ್ಟೆಂಬರ್‌ 10ರಂದು ಕೊನೆಗೊಂಡಿದೆ.

ಆರು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ, 2020ರ ಡಿಸೆಂಬರ್ 4ರಂದು ರಾಜ್ಯ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ 2020ರ ಡಿಸೆಂಬರ್ 18ರಂದು ಅಮಾನತಿನಲ್ಲಿ ಇರಿಸಿತ್ತು.

ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ– 2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ಸ್ಥಳೀಯ ಸಂಸ್ಥೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಸಂಬಂಧ, ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲೆಂದೇ ನೂತನ ಕಾನೂನನ್ನು ಅಂಗೀಕರಿಸಲಾಗಿದೆ ಎಂದು ಮೇಲ್ಮನವಿಯಲ್ಲಿ ಹೇಳಿತ್ತು.

ಈ ವರ್ಷದ ಮೇ ತಿಂಗಳಲ್ಲಿ ಆದೇಶ ಹೊರಡಿಸಿದ್ದ ಸುಪ್ರೀಂ ಕೋರ್ಟ್‌, ಒಬಿಸಿಗಳಿಗೆ ಮೀಸಲಾತಿ ಒದಗಿಸುವಾಗ ಮೂರು ಹಂತದ ಪರಿಶೀಲನೆ (ಟ್ರಿಪಲ್‌ ಟೆಸ್ಟ್‌) ಮಾಡಬೇಕು ಎಂದು ಸೂಚಿಸಿತ್ತು.

’ಬಿಬಿಎಂಪಿಯ 243 ವಾರ್ಡ್‌ಗಳಿಗೆ ನವೆಂಬರ್ 30ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು‘ ಎಂದು 2022ರ ಸೆಪ್ಟೆಂಬರ್ 30ರಂದು ಹೈಕೋರ್ಟ್ ಆದೇಶಿಸಿತ್ತು. ಆದರೆ, ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸಬೇಕು ಎಂದು ಕೋರಿ ನಗರಾಭಿವೃದ್ಧಿ ಇಲಾಖೆ ಇತ್ತೀಚೆಗೆ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.