ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಹೊಸ ಪ್ರಣಾಳಿಕೆಯನ್ನು ಎದೆತಟ್ಟಿಕೊಂಡು ಸಮರ್ಥಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಮೊದಲು ಹಳೆಯ ಎರಡು ಪ್ರಣಾಳಿಕೆಗಳ ಲೆಕ್ಕ ಕೊಡಿ’ ಎಂದು ಪ್ರಶ್ನಿಸಿದ್ದಾರೆ.
‘ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹15 ಲಕ್ಷ ಹಣ ಜಮೆ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವುದು ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿದ್ದ ಎಷ್ಟು ಭರವಸೆಗಳನ್ನು ಅನುಷ್ಠಾನಕ್ಕೆ ತಂದಿದ್ದೀರಿ ಎಂಬ ಲೆಕ್ಕಕೊಡಿ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈಗಾಗಲೇ ದೇಶದ ಜನ ಮೋದಿ ಅವರದ್ದು ‘ಕೇವಲ ಗ್ಯಾರಂಟಿ – ನೋ ವಾರಂಟಿ’ ಎಂದು ಆಡಿಕೊಳ್ಳುತ್ತಿದ್ದಾರೆ. ನಿಮ್ಮ ಹಳೆಯ ಪ್ರಣಾಳಿಕೆಯಲ್ಲಿ ಈಡೇರದ ಭರವಸೆಗಳ ಒಂದಷ್ಟು ಲೆಕ್ಕ ಕೊಟ್ಟಿದ್ದೇನೆ, ಈ ಬಗ್ಗೆ ನಿಮ್ಮ ಉತ್ತರದ ನಿರೀಕ್ಷೆಯಲ್ಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಈಗ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಜತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೊಳಿಸಿದ್ದೇವೆ. ಈ ಮೂಲಕ ನುಡಿದಂತೆ ನಡೆದ ಖ್ಯಾತಿ ನಮ್ಮ ಸರ್ಕಾರದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.