ADVERTISEMENT

28 ಕ್ಷೇತ್ರ ಗೆಲ್ಲುವ ಗುರಿ ನಿಗದಿ: ವಿಜಯೇಂದ್ರ

28 ಸಾವಿರ ಹಳ್ಳಿಗಳಿಗೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 16:15 IST
Last Updated 8 ಫೆಬ್ರುವರಿ 2024, 16:15 IST
ಬಿ.ವೈ.ವಿಜಯೇಂದ್ರ, ನಂದೀಶ್‌ ರೆಡ್ಡಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬಿ.ವೈ.ವಿಜಯೇಂದ್ರ, ನಂದೀಶ್‌ ರೆಡ್ಡಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.   

ಬೆಂಗಳೂರು: ‘ದೇಶದಲ್ಲಿ ಮೋದಿ ಅಲೆ ಬೀಸುತ್ತಿದ್ದು, ರಾಜ್ಯದಲ್ಲಿ ಈ ಬಾರಿ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ– ಜೆಡಿಎಸ್‌ ಸೇರಿ ಗೆಲ್ಲುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಚ್‌.ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಸುದ್ದಿಗಾರರ ಜತೆ ಮಾತನಾಡಿದರು. 

‘ದೇಶದ ಭವಿಷ್ಯದ ದೃಷ್ಟಿಯಿಂದ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ದೇಶದ ಜನರಿಗೆ ಮನವರಿಕೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್‌ ಜತೆ ಸೇರಿ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ’ ಎಂದರು.

ADVERTISEMENT

ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತುಮೋದಿ ಅವರ ಅಪೇಕ್ಷೆಯ ಮೇರೆಗೆ ಗ್ರಾಮ ಚಲೋ ಅಭಿಯಾನ ಆರಂಭಿಸಲಾಗಿದೆ. ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, ನಗರದ 19 ಸಾವಿರ ಬೂತ್‌ಗಳಲ್ಲಿ ಇದೇ 9, 10 ಮತ್ತು 11ರಂದು ಅಭಿಯಾನ ನಡೆಯಲು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

‘ಎಚ್‌.ಗೊಲ್ಲಹಳ್ಳಿ ಗ್ರಾಮದಲ್ಲಿ ಬೂತ್‌ ಸಂಖ್ಯೆ 454, 455 ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047 ನೇ ಇಸವಿಗೆ ಭಾರತವು ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು, ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಬಯಕೆ ಮೋದಿ ಅವರದು. ಅವರ ಕನಸು ನನಸು ಮಾಡಲು ಎಲ್ಲ ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ’ ಎಂದು ವಿಜಯೇಂದ್ರ ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ,ರಾಜ್ಯ ಕಾರ್ಯದರ್ಶಿಗಳಾದ ವಿನಯ್‌ ಬಿದರೆ, ಶರಣು ತಳ್ಳಿಕೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್‌ ಇದ್ದರು.

ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸೋಮಶೇಖರ್‌ ಗೈರು

ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ.ಸೋಮಶೇಖರ್‌ ಕಾರ್ಯಕ್ರಮದಲ್ಲಿ ಭಾಗಿಯಾಗಲಿಲ್ಲ.

ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿಯು ರಾಜ್ಯದಾದ್ಯಂತ ಹಮ್ಮಿಕೊಂಡಿರುವ ‘ಗ್ರಾಮ ಚಲೋ’ ಅಭಿಯಾನಕ್ಕೆ ಯಶವಂತಪುರ ಕ್ಷೇತ್ರದ ಎಚ್.ಗೊಲ್ಲಹಳ್ಳಿಯಲ್ಲಿ ವಿಜಯೇಂದ್ರ ಚಾಲನೆ ನೀಡಿದರು. ‍ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲೂ ಕಾಣಿಸಿಕೊಳ್ಳದ ಸೋಮಶೇಖರ್ ಕ್ಷೇತ್ರದಲ್ಲಿ ನಡೆದ ಪಕ್ಷದ ಅಧ್ಯಕ್ಷರ ಕಾರ್ಯಕ್ರಮದಿಂದಲೂ ದೂರ ಉಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.