ಬೆಂಗಳೂರು: ಮಕರ ಸಂಕ್ರಾಂತಿ ಸಂದರ್ಭದಲ್ಲೇ ವೇತನ ಹೆಚ್ಚಳ ಘೋಷಿಸುವ ಮೂಲಕ ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಹಬ್ಬದ ಉಡುಗೊರೆ ನೀಡಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5 ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದ, ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ವೇತನವನ್ನು ₹32 ಸಾವಿರಕ್ಕೆ ಹೆಚ್ಚಿಸಲಾಗಿದೆ. 5 ವರ್ಷಕ್ಕಿಂತ ಕಡಿಮೆ ಅವಧಿಗೆ ಸೇವೆ ಸಲ್ಲಿಸಿದವರ ವೇತನ ₹30 ಸಾವಿರಕ್ಕೆ, 5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿ ಪಡಿಸಿದ ಅರ್ಹತೆ ಇಲ್ಲದೇ ಇರುವವರ ವೇತನ ₹28 ಸಾವಿರಕ್ಕೆ ಏರಿಕೆ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8ರಿಂದ 10 ಗಂಟೆ ಇದ್ದುದನ್ನು 15ಗಂಟೆಗಳಿಗೆ ಹೆಚ್ಚಿಸಲಾಗಿದೆ. ಉಪನ್ಯಾಸಕರ ಅವಧಿ ಸೆಮಿಸ್ಟರ್ ಬದಲು, ಒಂದು ಶೈಕ್ಷಣಿಕ ವರ್ಷಕ್ಕೆ ನಿಗದಿ ಮಾಡಲಾಗಿದೆ ಎಂದೂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.