ಮಂಡ್ಯ:ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಜಿ.ಮಾದೇಗೌಡ (94) ಶನಿವಾರ ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
1962, 1967, 1972, 1978, 1983, 1985ರ ವಿಧಾನಸಭಾ ಚುನಾ
ವಣೆಯಲ್ಲಿ ಜಯಗಳಿಸಿ ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧಿ ಪಡೆದಿದ್ದರು. 1980–83ರವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು.
ಕಿರುಗಾವಲು ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿ ಗೆಲುವು ಸಾಧಿಸಿದ್ದರು. 1996ರಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದಾಗ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟದಲ್ಲಿ ಪಾಲ್ಗೊಂಡರು.
ಅದೇ ವರ್ಷ (1996) ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ವಿರುದ್ಧ ಸೋಲು ಕಂಡರು. ನಂತರ 1998ರ ಲೋಕಸಭಾ ಚುನಾವಣೆಯಲ್ಲಿ ಅಂಬರೀಷ್ ವಿರುದ್ಧ ಸೋಲು ಕಂಡಿದ್ದರು. ನಂತರ ಅವರು ಸಕ್ರಿಯ ರಾಜಕಾರಣದಲ್ಲಿ ಇದ್ದರೂ ಚುನಾವಣೆಗೆ ಸ್ಪರ್ಧೆ ಮಾಡಲಿಲ್ಲ.
2003ರಲ್ಲಿ ಕಾವೇರಿ ಹೋರಾಟದ ನಡೆದಾಗ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಟೀಕಿಸಿ ಹೋರಾಟದ ಛಾಪು ಮೂಡಿಸಿದದರು. ಮದ್ದೂರು ತಾಲ್ಲೂಕು ಬೋರ್ಡ್ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದ ಅವರು ನಗರದಲ್ಲಿ ಗಾಂಧಿ ಭವನ ಟ್ರಸ್ಟ್ ಸ್ಥಾಪಿಸಿ ವಿವಿಧ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು.
ವಿಧಾನಪರಿಷತ್ ಮಾಜಿ ಸದಸ್ಯ ಮಧು ಜಿ. ಮಾದೇಗೌಡ, ಮಿಮ್ಸ್ ನಿವೃತ್ತ ನಿರ್ದೇಶಕ ಡಾ.ಜಿ.ಎಂ.ಪ್ರಕಾಶ್ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಪಾರ್ಥಿವ ದೇಹವನ್ನು ನಗರದ ಗಾಂಧಿಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಭಾನುವಾರ ಭಾರತೀನಗರ ಸಮೀಪದ ಹನುಮಂತನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.