ಬೆಂಗಳೂರು: ‘ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ (ಮ್ಯಾನುಯೆಲ್ ಸ್ಕ್ಯಾವೆಂಜರ್ಸ್) ಸಮಗ್ರ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಕಾರ್ಮಿಕರಿಂದ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಕಾರ್ಮಿಕ ಒಕ್ಕೂಟ ಮಂಡಳಿಯ ಅಖಿಲ ಭಾರತ ಕೇಂದ್ರ ಸಮಿತಿಯ (ಎಸಿಸಿಟಿಯು) ಕರ್ನಾಟಕ ಘಟಕ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
‘ತಮಟೆ’ ಸ್ವಯಂಸೇವಾ ಸಂಸ್ಥೆ ಪರ ಹಾಜರಾಗಿದ್ದ ಹಿರಿಯ ವಕೀಲೆ ಜಯ್ನಾ ಕೊಠಾರಿ, ‘ಸಮೀಕ್ಷೆ ನಡೆಸಲು ನ್ಯಾಯಾಲಯ ಈ ಹಿಂದೆಯೇ ನಿರ್ದೇಶನ ನೀಡಿದ್ದರೂ ಈತನಕ ಆಗಿಲ್ಲ‘ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಯಾಗಿ ಸರ್ಕಾರದ ಪರ ವಕೀಲರು ‘ಸಮೀಕ್ಷೆ ನಡೆಸಲು ನೋಡಲ್ ಅಧಿಕಾರಿ ನೇಮಿಸಲಾಗಿದೆ’ ಎಂದು ತಿಳಿಸಿದರು. ಇದನ್ನು ಪರಿಗಣಿಸಿದ ಪೀಠವು, ‘ಎರಡು ತಿಂಗಳಲ್ಲಿ ಮ್ಯಾನುಯೆಲ್ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ ಪೂರ್ಣಗೊಳಿಸಿ. ಮ್ಯಾನುಯೆಲ್ ಸ್ಕ್ಯಾವೆಂಜರ್ಸ್‌ಗಳಿಗೆ ನೀಡಲಾಗುವ ಉಪಕರಣಗಳ ಸಮಗ್ರ ಪಟ್ಟಿಯನ್ನು 30 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.