ಬೆಂಗಳೂರು: ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಅಮಾನತಿನಲ್ಲಿ ಇರಿಸಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
‘ವಕ್ಫ್ ಮಂಡಳಿಗಳಿಗೆ ಮುಸ್ಲಿಂ ವಿವಾಹಗಳನ್ನು ಕಡ್ಡಾಯವಾಗಿ ನೋಂದಾಯಿಸುವ ಯಾವುದೇ ಶಾಸನಾತ್ಮಕ ಅಧಿಕಾರ ಇಲ್ಲ’ ಎಂದು ಆಕ್ಷೇಪಿಸಿ ಎ.ಆಲಂ ಪಾಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
‘ಅರ್ಜಿದಾರರ ಆಕ್ಷೇಪವನ್ನು ಪುಷ್ಟೀಕರಿಸುವಂತಹ ಪ್ರಬಲ ಕಾರಣ ಮೇಲ್ನೋಟಕ್ಕೆ ಕಂಡು ಬಂದಿದೆ. ಹಾಗಾಗಿ, ರಾಜ್ಯ ಸರ್ಕಾರ ವಕ್ಫ್ ಮಂಡಳಿ ಮತ್ತು ಅದರ ಅಧಿಕಾರಿಗಳಿಗೆ ಮುಸ್ಲಿಂ ದಂಪತಿಗಳ ವಿವಾಹ ಪ್ರಮಾಣ ಪತ್ರಗಳನ್ನು ವಿತರಿಸಲು ನೀಡಿರುವ ಅನುಮತಿಯನ್ನು 2025ರ ಜನವರಿ 7ರವರೆಗೆ ಅಮಾನತಿನಲ್ಲಿ ಇರಿಸಲಾಗಿದೆ’ ಎಂದು ನ್ಯಾಯಪೀಠ ಆದೇಶಿಸಿದೆ. ಅಂತೆಯೇ, ರಾಜ್ಯ ವಕ್ಫ್ ಮಂಡಳಿಗೆ ನೋಟಿಸ್ ಜಾರಿಗೊಳಿಸಲೂ ಆದೇಶಿಸಿದೆ.
‘ವಕ್ಫ್ ಮಂಡಳಿ ಅಥವಾ ಅದರ ಅಧಿಕಾರಿಗಳು ಸರ್ಕಾರದ ಆದೇಶದ ನೆಪದಲ್ಲಿ ವಿವಾಹ ಪ್ರಮಾಣ ಪತ್ರಗಳನ್ನು ಮುಂದಿನ ಆದೇಶದವರೆಗೆ ವಿತರಣೆ ಮಾಡುವಂತಿಲ್ಲ’ ಎಂದೂ ಆದೇಶದಲ್ಲಿ ವಿವರಿಸಲಾಗಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲೆ ಎಂ.ಸರಸ್ವತಿ ವಾದ ಮಂಡಿಸಿದರು.
ಕೋರಿಕೆ: ‘ರಾಜ್ಯ ಸರ್ಕಾರದ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಇಲಾಖೆ 2023ರ ಸೆಪ್ಟೆಂಬರ್ 30ರಂದು ಆದೇಶವೊಂದನ್ನು ಹೊರಡಿಸಿದೆ. ಇದರನ್ವಯ ಮುಸ್ಲಿಂ ಸಮುದಾಯದ ವಿವಾಹ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಲಾಗಿದೆ. ಇದು ವಕ್ಫ್ ಕಾಯ್ದೆ-1995ರ ನಿಯಮಗಳಿಗೆ ವಿರುದ್ಧವಾಗಿದೆ. ಆದ್ದರಿಂದ, ಸರ್ಕಾರದ ಈ ಆದೇಶವನ್ನು ರದ್ದುಗೊಳಿಸಬೇಕು. ಈ ಮೊದಲಿದ್ದ ವ್ಯವಸ್ಥೆಯನ್ನೇ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.