ಬೆಂಗಳೂರು: ‘ಇಂದಿರಾ ಕ್ಯಾಂಟೀನ್, ಶಾಲೆಗಳಲ್ಲಿನ ಬಿಸಿಯೂಟಕ್ಕೆ ಸಿರಿಧಾನ್ಯಗಳನ್ನು ಬಳಸುವುದು ಹಾಗೂ ಪಡಿತರ ವಿತರಣೆಯಲ್ಲಿ ಸಿರಿಧಾನ್ಯಗಳನ್ನು ಸೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕೃಷಿ ಇಲಾಖೆಯು ಇಲ್ಲಿನ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಮೂರು ದಿನಗಳ ‘ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024’ಕ್ಕೆ ಶುಕ್ರವಾರ ಚಾಲನೆ ನೀಡಿ, ಅವರು ಮಾತನಾಡಿದರು.
’ಇಂದಿರಾ ಕ್ಯಾಂಟೀನ್, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಪಡಿತರದಲ್ಲಿ ಸಿರಿಧಾನ್ಯಗಳನ್ನು ಸೇರಿಸುವ ಕುರಿತು ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ತಿಳಿಸಿದರು.
‘ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ ಕುರಿತು ಕೃಷಿ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳಿಗೆ ಸಲಹೆ ನೀಡಿದ್ದೇನೆ. ಇದಕ್ಕಾಗಿ ಪ್ರತ್ಯೇಕ ಕೋಶವೊಂದನ್ನು ಆರಂಭಿಸಲಾಗುತ್ತದೆ. ಮುಂದಿನ ವರ್ಷದಿಂದಲೇ ನಾವು ಬಿತ್ತನೆ ಬೀಜಗಳನ್ನು ರಫ್ತು ಮಾಡುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷಾಚರಣೆ ನಂತರ, ದೇಶದ ಸಿರಿಧಾನ್ಯ ರಫ್ತಿನಲ್ಲಿ ಶೇ 30ರಷ್ಟು ಹೆಚ್ಚಳವಾಗಿದೆ. ವಿಶ್ವದಾದ್ಯಂತ ರಾಜ್ಯದ ಸಿರಿಧಾನ್ಯಗಳ ಜೊತೆಗೆ, ಬಿತ್ತನೆ ಬೀಜಕ್ಕೂ ಬೇಡಿಕೆ ಹೆಚ್ಚಿದೆ. ಹಾಗಾಗಿ, ಗುಣಮಟ್ಟದ ಬಿತ್ತನೆ ಬೀಜಗಳನ್ನು ಉತ್ಪಾದಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.
’ಪ್ರಸ್ತುತ ರಾಜ್ಯದಲ್ಲಿ ಕೈಗಾರಿಕೆ ಇಲಾಖೆ ಅಡಿಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತು ವಿಭಾಗವನ್ನು, ಅದೇ ಇಲಾಖೆಯಡಿಯಲ್ಲೇ ಪ್ರತ್ಯೇಕ ವಿಭಾಗವನ್ನಾಗಿಸಿ, ಸಿಬ್ಬಂದಿ ನಿಯೋಜಿಸಬೇಕು. ಇದರಿಂದ ನಮ್ಮ ರಾಜ್ಯದ ಕೃಷಿ –ತೋಟಗಾರಿಕೆ ಉತ್ಪನ್ನಗಳನ್ನು ಬೇರೆ ಬೇರೆ ದೇಶಗಳಿಗೆ ರಫ್ತು ಹೆಚ್ಚು ಅನುಕೂಲವಾಗುತ್ತದೆ’ ಎಂದು ಅವರು ತಿಳಿಸಿದರು.
‘ಕೇಂದ್ರ ಸರ್ಕಾರ ಆಹಾರ ಸಂಸ್ಕರಣಾ ಘಟಕ ಮತ್ತು ಸಾಯವ ಕೃಷಿಗೆ ಒತ್ತು ನೀಡುತ್ತಿದೆ. ರಾಜ್ಯದಲ್ಲೂ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ ಸೇರಿದಂತೆ, ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಅನುಮೋದನೆ ಕೊಡಿಸಲಾಗುವುದು’ ಎಂದು ಭರವಸೆ ನೀಡಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.