ADVERTISEMENT

ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆಗೆ ಸೂಚನೆ: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 15:18 IST
Last Updated 21 ಜೂನ್ 2024, 15:18 IST
ಲಕ್ಷ್ಮಿ ಹೆಬ್ಬಾಳ್ಕರ
ಲಕ್ಷ್ಮಿ ಹೆಬ್ಬಾಳ್ಕರ   

ಬೆಂಗಳೂರು: ಅಂಗನವಾಡಿಗಳ ಮೂಲಕ ಮಕ್ಕಳು ಮತ್ತು ಮಹಿಳೆಯರಿಗೆ ವಿತರಿಸುವ ಪೌಷ್ಟಿಕ ಆಹಾರದಲ್ಲಿ ಗುಣಮಟ್ಟದಲ್ಲಿ ವ್ಯತ್ಯಾಸ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲಾಖೆಯ ವ್ಯಾಪ್ತಿಯ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲಾವಾರು ಪ್ರಗತಿ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಅವರು, ‘ಪೂರಕ ಪೌಷ್ಟಿಕ ಆಹಾರ ಯೋಜನೆ ಮತ್ತು ಅಂಗನವಾಡಿ ಮಕ್ಕಳ ಆಹಾರ ಪೂರೈಕೆಯಲ್ಲಿ ಲೋಪ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುತ್ತಿರುವ ಎಂಎಸ್‌ಪಿಸಿ ಕೇಂದ್ರಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿನೀಡಿ ಪರಿಶೀಲಿಸಬೇಕು. ಆಹಾರ ಪದಾರ್ಥಗಳ ಗುಣಮಟ್ಟದ ತಪಾಸಣೆ ಮಾಡಬೇಕು. ಪೋಷಣ್‌ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ಮಳೆಗಾಲ ಆರಂಭವಾಗಿರುವುದರಿಂದ ಅಂಗನವಾಡಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ವಿದ್ಯುತ್‌ ಪರಿವರ್ತಕ, ಮರ, ಗಿಡಗಳಿದ್ದರೆ ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ‌ ಕ್ರಮಗಳ ಕುರಿತು ಮಾಹಿತಿ ಪಡೆದ ಸಚಿವರು, ‘ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಾಲ್ಯ ವಿವಾಹ ನಡೆಯದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.

ಇಲಾಖೆಯ ಕಾರ್ಯದರ್ಶಿ ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ, ವಿಶೇಷಾಧಿಕಾರಿ ಬಿ.ಎಚ್.ನಿಶ್ಚಲ್‌ ಮತ್ತು ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು ಸಭೆಯಲ್ಲಿದ್ದರು.

ಗ್ರಾಚ್ಯುಟಿಗೆ ₹29.91 ಕೋಟಿ ಬಿಡುಗಡೆ

‘ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಉದ್ದೇಶಕ್ಕಾಗಿ ₹29.91 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಸುಮಾರು 2537 ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಬಿಡುಗಡೆಯಿಂದ ಆರ್ಥಿಕವಾಗಿ‌ ನೆರವಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.