ಬೆಂಗಳೂರು: ‘ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಮೇತರರನ್ನು ನೇಮಿಸಬೇಕು ಎಂಬ ಮನವಿಯ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.
ಈ ಕುರಿತಂತೆ ಶಿವಮೊಗ್ಗದ ವಕೀಲ ಬಿ.ವಿನೋದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಪೀಠವು, ‘ಅರ್ಜಿದಾರರ ಮನವಿ ಕುರಿತಂತೆ ಶೀಘ್ರವೇ ಒಂದು ತೀರ್ಮಾನಕ್ಕೆ ಬನ್ನಿ’ ಎಂದು ಸರ್ಕಾರದ ಪರ ವಕೀಲರಿಗೆ ಮೌಖಿಕ ಸೂಚನೆ ನೀಡಿತು. ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಲಾಗಿದೆ.
‘ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಕೇವಲ ಮುಸ್ಲಿಮರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆ. ಸರತಿ ಆಧಾರದಲ್ಲಿ ಇತರೆ ಅಲ್ಪಸಂಖ್ಯಾತ ಸಮುದಾಯಗಳಿಗೂ ಅವಕಾಶ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.