ಹುಬ್ಬಳ್ಳಿ: ‘ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ಹಿಜಾಬ್ ಮೇಲಿನ ನಿಷೇಧವನ್ನು ವಾಪಸ್ ಪಡೆಯಲು ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ತುಷ್ಟೀಕರಣದ ಪರಮಾವಧಿ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಿಜಾಬ್ ವಿಷಯ ಈಗಾಗಲೇ ನ್ಯಾಯಾಲಯದಲ್ಲಿ ಇರುವುದರಿಂದ ಹೇಳಿಕೆ ನೀಡಬಾರದು ಎನ್ನುವುದು ಸಾಮಾನ್ಯ ತಿಳುವಳಿಕೆ. ಆದರೂ ಮುಖ್ಯಮಂತ್ರಿ ಅವರು ತುಷ್ಟೀಕರಣಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಹಿಂದೂ ವಿವಾಹಿತ ಮಹಿಳೆಯರು ಪರೀಕ್ಷೆಗೆ ಹಾಜರಾಗುವಾಗ ಮಾಂಗಲ್ಯ, ಕಾಲುಂಗುರ ತೆಗೆದಿಡಲು ಹೇಳುತ್ತಾರೆ. ಇನ್ನೊಂದೆಡೆ, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಹೇಳುತ್ತಿದ್ದಾರೆ. ಇದನ್ನು ನೋಡಿದರೆ ತುಷ್ಟೀಕರಣ ನೀತಿ ನಡೆಯುತ್ತಿರುವುದು ಗೊತ್ತಾಗುತ್ತದೆ’ ಎಂದು ಹೇಳಿದರು.
‘ವಿದ್ಯಾರ್ಥಿಗಳಲ್ಲಿ ಜಾತಿ, ಧರ್ಮ, ಮತ, ಪಂಥ ಇರುವುದಿಲ್ಲ. ಎಲ್ಲರೂ ಸಮಾನರು. ಆದರೆ, ಇವತ್ತು ಮುಖ್ಯಮಂತ್ರಿ ಅವರು ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.