ADVERTISEMENT

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಶಾಸಕ ಎಸ್‌.ಟಿ.ಸೋಮಶೇಖರ್ ವಿರೋಧ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 11:47 IST
Last Updated 5 ಅಕ್ಟೋಬರ್ 2023, 11:47 IST
   

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್ ವಿರೋಧ ವ್ಯಕ್ತಪಡಿಸಿದ್ದಾರೆ. 

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಅಧಿಕೃತ ಘೋಷಣೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವೆ’ ಎಂದರು.

‘ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ಮೊದಲಿನಿಂದಲೂ ಪರಸ್ಪರ ವಿರುದ್ಧವಾಗಿ ಇದ್ದವರು. ಪಕ್ಷದ ಕಾರ್ಯಕರ್ತರು ಅನುಭವಿಸಿದ ಕಿರುಕುಳವನ್ನು ಹತ್ತಿರದಿಂದ ಕಂಡಿದ್ದೇನೆ. ಪಕ್ಷಗಳು ಹೊಂದಾದರೂ, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಅಸಾಧ್ಯವಾಗಿದೆ. ಮೈತ್ರಿ ವಿರೋಧಿಸಿ ಈಗಾಗಲೇ ಹಲವು ಕಾರ್ಯಕರ್ತರು, ಬೆಂಬಲಿಗರು ಕಾಂಗ್ರೆಸ್‌ ಸೇರುವ ನಿರ್ಧಾರ ಮಾಡಿದ್ದಾರೆ. ಇದು ನನ್ನ ಕ್ಷೇತ್ರದ ಸಮಸ್ಯೆ ಮಾತ್ರವಲ್ಲ, ಇತರೆ ಶಾಸಕರೂ ತಮ್ಮ ಕ್ಷೇತ್ರಗಳಲ್ಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

‘ನಾನೂ ಸಹ 20 ವರ್ಷಗಳಿಂದ ಜೆಡಿಎಸ್‌ ಜತೆ ಸೆಣಸಾಟ ನಡೆಸಿಕೊಂಡು ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮಧ್ಯೆ ಹೊಂದಾಣಿಕೆಯಾದರೂ, ಕಾರ್ಯಕರ್ತರು ಪರಸ್ಪರ ಮತ ಚಲಾಯಿಸಲಿಲ್ಲ. ಇದರಿಂದ ಮೈತ್ರಿ ಎಷ್ಟು ಸ್ಥಾನದಲ್ಲಿ ಗೆಲುವು ಪಡೆಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ.’ ಎಂದು ಗತಮೈತ್ರಿ ನೆನಪಿಸಿದರು.

‘ನಮಗೆ ಬಿ.ಎಸ್‌. ಯಡಿಯೂರಪ್ಪ ಅವರೇ  ಹೈಕಮಾಂಡ್‌. ಸದ್ಯ ಯಾವ ನಿರ್ಧಾರವನ್ನೂ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, ತಿಂಗಳಿನಿಂದ ಮೌನವಾಗಿರುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.