ಬೆಂಗಳೂರು: ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಗುರುವಾರ ಮುಕ್ತಾಯವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಂಡಾಯ ಬೇನೆ ಕಾಡಿದೆ.
ಲೋಕಸಭಾ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ಬಂಡಾಯದ ಬಿಸಿ ಎದುರಿಸಿದ್ದವು. ಈಗ ವಿಧಾನ ಪರಿಷತ್ ಚುನಾವಣೆಯಲ್ಲೂ ಬಂಡಾಯ ಮುಂದುವರಿದಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯ ದಿನವೂ ಕೆಲವರು ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮಾಜಿ ಸದಸ್ಯ ಮರಿತಿಬ್ಬೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಪರಿಷತ್‌ನ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೆಡಿಎಸ್‌ನ ವಿವೇಕಾನಂದ ಅವರನ್ನು ಬಿಜೆಪಿ–ಜೆಡಿಎಸ್ ಮೈತ್ರಿ ಕೂಟ ಕಣಕ್ಕೆ ಇಳಿಸಿದೆ. ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಬೇಕಿದ್ದ ಶ್ರೀಕಂಠೇಗೌಡ ಅವರನ್ನು ಜೆಡಿಎಸ್ ಕಾರ್ಯಕರ್ತರು ಎಳೆದಾಡಿದ್ದರಿಂದ ಅವರು ಗಾಯಗೊಂಡು ಆಸ್ಪತ್ರೆಗೆ ಸೇರಿದರು. ಹೀಗಾಗಿ, ಅವರಿಗೆ ನಾಮಪತ್ರ ಸಲ್ಲಿಸಲು ಸಾಧ್ಯವಾಗಲಿಲ್ಲ. ಬಿಜೆಪಿಯು ನಿಂಗರಾಜೇಗೌಡ ಅವರ ಹೆಸರನ್ನು ಘೋಷಿಸಿದ್ದು, ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದರು. ‘ಕಣದಿಂದ ಹಿಂದೆ ಸರಿಯಲು ಅವರು ಒಪ್ಪಿಕೊಂಡಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್, ಈಶಾನ್ಯ ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿ ಬಂಡಾಯ ಬಿಸಿ ಎದುರಿಸುತ್ತಿವೆ.
ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದರ ವಿರುದ್ಧ ತಿರುಗಿಬಿದ್ದಿರುವ ಎಸ್.ಪಿ. ದಿನೇಶ್, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಹಿಂದಿನ ಎರಡು ಚುನಾವಣೆಗಳಲ್ಲಿ ದಿನೇಶ್, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
‘ಎರಡೂ ಬಾರಿ ಕಡಿಮೆ ಮತಗಳ ಅಂತರದಿಂದ ಬಿಜೆಪಿ ಎದುರು ಸೋಲು ಕಂಡಿದ್ದ ನನಗೆ ಈ ಬಾರಿ ಟಿಕೆಟ್ ನೀಡಬೇಕಿತ್ತು.ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಗೆಲುವಿಗೆ ಅನುಕೂಲವಾಗುತ್ತಿತ್ತು’ ಎಂದು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ವಿರುದ್ಧ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದಾರೆ.
ಪರಿಷತ್ ಚುನಾವಣೆಗೆ ನನಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಭರವಸೆ ನೀಡಿದ್ದರು. ನಾನು ಚುನಾವಣಾ ತಯಾರಿ ನಡೆಸಿದ್ದೆ. ಈಗ ಟಿಕೆಟ್ ತಪ್ಪಿಸಲಾಗಿದೆ. ಹಿಂದಿನಂತೆ ಪ್ರಾದೇಶಿಕ ನ್ಯಾಯ ಪಾಲನೆ ಮಾಡಿಲ್ಲ’ ಎಂದು ಭಟ್ ಹರಿಹಾಯ್ದಿದ್ದಾರೆ.
ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಹಾಲಿ ಸದಸ್ಯ ಎಸ್.ಎಲ್. ಭೋಜೇಗೌಡ ಸ್ಪರ್ಧಿಸಿದ್ದಾರೆ. ಕೆ.ಕೆ. ಮಂಜುನಾಥ್ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ. ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶೆಟ್ಟಿ ಶಂಕರಘಟ್ಟ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಹಾಲಿ ಸದಸ್ಯ ಚಂದ್ರಶೇಖರ ಪಾಟೀಲ ಕಾಂಗ್ರೆಸ್ ಹುರಿಯಾಳು. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ ಬಿಜೆಪಿ ಅಭ್ಯರ್ಥಿ. ಅವರಿಗೆ ಸಡ್ಡು ಹೊಡೆದ ಪಕ್ಷದ ಮುಖಂಡ, ಕಲಬುರಗಿ–ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಂಡಾಯದ ಬಿಸಿ ಎದುರಾಗಿದ್ದರಿಂದ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ.
ಬಿಜೆಪಿಯಿಂದ ಹಾಲಿ ಸದಸ್ಯ ಅ. ದೇವೇಗೌಡ ಸ್ಪರ್ಧಿಸಿದ್ದಾರೆ. ಅವರಿಗೆ ಕಾಂಗ್ರೆಸ್‌ನ ರಾಮೋಜಿ ಗೌಡ ಎದುರಾಳಿ. ಕೆಪಿಸಿಸಿ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಫರ್ಡಿನಾಂಡ್ ಲಾರೆನ್ಸ್ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ಕಣಕ್ಕೆ ಇಳಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.