ಬೆಂಗಳೂರು: ವಿಧಾನ ಪರಿಷತ್‌ನ ಆರು ಕ್ಷೇತ್ರಗಳ ಚುನಾವಣೆಯಲ್ಲಿ ಐದು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಶುಕ್ರವಾರ ಪೂರ್ಣಗೊಂಡಿದ್ದು, 12 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. ಈ ಐದು ಕ್ಷೇತ್ರಗಳಲ್ಲಿ ಒಟ್ಟು 76 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಕೋರಿ ವಕೀಲರೊಬ್ಬರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಶ್ರೀನಿವಾಸ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ನಾಮಪತ್ರ ಪರಿಶೀಲನೆಯನ್ನು ಶನಿವಾರಕ್ಕೆ ಮುಂದೂಡಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಮೂವರು, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿವೆ. ನೈರುತ್ಯ ಪದವೀಧರರು ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳು ಸ್ವೀಕೃತವಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 26, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 16, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 9, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 12 ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಮಾತ್ರ ಒಬ್ಬ ಮಹಿಳಾ ಅಭ್ಯರ್ಥಿ ಇದ್ದಾರೆ.
ಈ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯಲು ಸೋಮವಾರದವರೆಗೂ(ಮೇ 20) ಅವಕಾಶವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.