ADVERTISEMENT

ರಾಷ್ಟ್ರೀಯ ಯೋಜನೆಯಾಗಿ ಭದ್ರಾ ಮೇಲ್ದಂಡೆ: ಸಂಸದರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 16:08 IST
Last Updated 25 ಜುಲೈ 2024, 16:08 IST
<div class="paragraphs"><p>ಭದ್ರಾ ಮೇಲ್ದಂಡೆ ಯೋಜನೆ</p></div>

ಭದ್ರಾ ಮೇಲ್ದಂಡೆ ಯೋಜನೆ

   

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಹಾಗೂ ಈ ಯೋಜನೆಗೆ ₹5300 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ ಮನವಿ ಮಾಡಿದರು. 

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. 

ADVERTISEMENT

‘ಮಧ್ಯ ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿಕರಿಗೆ ನೀರು ಇಲ್ಲದಂತಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ ವರ್ಷ ಬಜೆಟ್‌ನಲ್ಲಿ ₹5300 ಕೋಟಿ ಅನುದಾನ ಘೋಷಿಸಲಾಗಿದೆ. ಆದರೆ, ಈ ಅನುದಾನ ಈವರೆಗೆ ಬಿಡುಗಡೆಯಾಗಿಲ್ಲ. ಇದರಿಂದಾಗಿ, ಯೋಜನಾ ಕಾಮಗಾರಿಗೆ ಗರ ಬಡಿದಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಈ ಯೋಜನೆಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು’ ಎಂದು ಅವರು ಆಗ್ರಹಿಸಿದರು. 

ಕಳಸಾ–ಬಂಡೂರಿ (ಮಹದಾಯಿ) ಯೋಜನೆಗೆ ಕೇಂದ್ರ ಜಲ ಆಯೋಗ 2022ರ ಡಿಸೆಂಬರ್‌ನಲ್ಲಿ ಒಪ್ಪಿಗೆ ನೀಡಿದೆ. ಕಳಸಾ ನಾಲಾ ಯೋಜನೆಗೆ 26 ಹೆಕ್ಟೇರ್‌ ಹಾಗೂ ಬಂಡೂರಿ ನಾಲಾ ಯೋಜನೆಗೆ 24 ಹೆಕ್ಟೇರ್ ಅರಣ್ಯ ಬಳಕೆಗೆ ಅನುಮೋದನೆ ಕೋರಿ ಪರಿವೇಷ್‌ ಪೋರ್ಟಲ್‌ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಇನ್ನೂ ಅನುಮೋದನೆ ನೀಡಿಲ್ಲ. ಕಳಸಾ ನಾಲಾ ಯೋಜನೆಗೆ ವನ್ಯಜೀವಿ ಅನುಮೋದನೆಗಾಗಿ ಕೇಂದ್ರ ವನ್ಯಜೀವಿ ಮಂಡಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಜನವರಿಯಲ್ಲಿ ನಡೆದ ಮಂಡಳಿಯ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಿತ್ತು. ಆದರೆ, ಯಾವುದೇ ತೀರ್ಮಾನಕ್ಕೆ ಬಂದಿರಲಿಲ್ಲ. ಸಚಿವರು ಮಧ್ಯಪ್ರವೇಶಿಸಿ ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.