ನವದೆಹಲಿ: ‘ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಭದ್ರಾವತಿಯ ಎಂಪಿಎಂ ಕಾರ್ಖಾನೆಗೆ ಮತ್ತೆ 40 ವರ್ಷಗಳಿಗೆ ಗುತ್ತಿಗೆ ನೀಡುವ ಪ್ರಸ್ತಾವ ಇಲ್ಲ’ ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೋಮವಾರ ಕೇಳಿದ ಪ್ರಶ್ನೆಗೆ ಇಲಾಖೆಯ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಉತ್ತರಿಸಿ, ‘ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಅನುಮತಿ ಕೋರಿ ರಾಜ್ಯ ಸರ್ಕಾರವು ‘ಪರಿವೇಷ್’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆದರೆ, ಗುತ್ತಿಗೆ ನವೀಕರಣ ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಇಲ್ಲಿಯವರೆಗೆ ಪ್ರಸ್ತಾವ ಸಲ್ಲಿಸಿಲ್ಲ’ ಎಂದರು.
1980ರಲ್ಲಿ ಭದ್ರಾವತಿಯ ಎಂಪಿಎಂ ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಸೇರಿದ ಅರಣ್ಯ ಪ್ರದೇಶ ಗುತ್ತಿಗೆ ನೀಡಲಾಗಿತ್ತು. 2020ರಲ್ಲಿ ಗುತ್ತಿಗೆ ಅವಧಿ ಮುಗಿದಿತ್ತು. ಮತ್ತೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ರಾಜ್ಯ ಸರ್ಕಾರ 2020ರಲ್ಲಿ ಒಪ್ಪಿಗೆ ನೀಡಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅನುಮೋದನೆ ಪಡೆದಿರಲಿಲ್ಲ. ಬಳಿಕ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತರಕಾರು ಎತ್ತಿತ್ತು. ಕಾರ್ಖಾನೆ ಪರ ನಿಲುವು ತಳೆದ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಜತೆಗೆ, ಕಾರ್ಖಾನೆಯ ನಿರ್ವಹಣಾ ಯೋಜನೆಗೂ ಒಪ್ಪಿಗೆ ಕೊಟ್ಟಿರಲಿಲ್ಲ.
ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಕಳೆದ ತಿಂಗಳು ಭೇಟಿ ಮಾಡಿ ಅರಣ್ಯ ಪ್ರದೇಶ ಗುತ್ತಿಗೆ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕು ಎಂದು ಒತ್ತಡ ಹೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.