ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ, ಮಹರ್ಷಿ ವಾಲ್ಮೀಕಿ ನಿಗಮ, ಪಿಎಸ್ಐ ನೇಮಕಾತಿ ಮತ್ತು ಶೇ 40ರ ಕಮಿಷನ್ ಹಗರಣಗಳೂ ಸೇರಿದಂತೆ ಈಗಿನ ಹಾಗೂ ಹಿಂದಿನ ಸರ್ಕಾರದಲ್ಲಿ ನಡೆದಿರುವ ಎಲ್ಲ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಈ ಸಂಬಂಧ ಮೈಸೂರಿನ ವಕೀಲ ಸಿ. ಸಂತೋಷ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
‘ಕೇವಲ ಪತ್ರಿಕಾ ವರದಿಗಳನ್ನು ಆಧರಿಸಿ ಈ ಅರ್ಜಿ ಸಲ್ಲಿಸಲಾಗಿದೆ. ನಿಮ್ಮ ಮನವಿಯನ್ನು ಪುರಸ್ಕರಿಸುವಂತಹ ಯಾವುದೇ ದೃಢೀಕೃತ ದಾಖಲೆಗಳಿಲ್ಲ. ಹೀಗಾಗಿ, ಈ ಅರ್ಜಿ ವಜಾಗೊಳಿಸಬೇಕಾಗುತ್ತದೆ’ ಎಂ ನ್ಯಾಯಪೀಠ ನಂತರ, ಸೂಕ್ತ ದಾಖಲೆಗಳು ಹಾಗೂ ವಾದಾಂಶಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿತು.
‘ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚು ಹೆಚ್ಚಾಗಿ ಹೊರಬರುತ್ತಿವೆ. ಸರ್ಕಾರದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಸ್ವತಃ ಮುಖ್ಯಮಂತ್ರಿಯೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷಿಸುವಂತಹ ಯಾವುದೇ ತನಿಖೆಗೆ ಸರ್ಕಾರ ಆದೇಶ ನೀಡಿಲ್ಲ. ಆದ್ದರಿಂದ, ಹಿಂದಿನ ಮತ್ತು ಈಗಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕಿದ್ದು ಇವುಗಳನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.