ADVERTISEMENT

ಮುಡಾ: ಸಿಎಂ ಮೇಲ್ಮನವಿ ಇದೇ 23ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 14:15 IST
Last Updated 14 ನವೆಂಬರ್ 2024, 14:15 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದ ಕ್ರಿಮಿನಲ್‌ ಪ್ರಕರಣದ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಆದೇಶಕ್ಕೆ ಅಸ್ತು ಎಂದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ಇದೇ 23ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.

ಈ ಸಂಬಂಧದ ರಿಟ್ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ ಬೆಳಿಗ್ಗೆ ಮನವಿ ಮಾಡಿದರು.

ವಿಡಿಯೊ ಕಾನ್ಫರೆನ್ಸ್ ಮುಖಾಂತರ ಹಾಜರಾಗಿದ್ದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮುಖ್ಯ ನ್ಯಾಯಮೂರ್ತಿಯವರು, ‘‍ತುರ್ತು ವಿಚಾರಣೆ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದರು. ಇದಕ್ಕೆ ಅಭಿಷೇಕ್, ‘ಹೌದು; ತುರ್ತು ಅಗತ್ಯ ಸೃಷ್ಟಿಯಾಗಿದೆ’ ಎಂದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ ಮೇಲ್ಮನವಿ ವಿಚಾರಣೆಯನ್ನು ಇದೇ 23ಕ್ಕೆ ನಿಗದಿಗೊಳಿಸಿ ಆದೇಶಿಸಿತು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ‌ 17 ಎ ಅಡಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರನ್ನು ಆಧರಿಸಿ ತನಿಖೆ ನಡೆಸಲು ಅನುಮತಿ ನೀಡಿದ್ದರು. ಈ ಅನುಮತಿ ನೀಡಿಕೆಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ‘ಶಾಸಕರು - ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ರಾಜ್ಯಪಾಲರ ಅನುಮತಿ ನೀಡಿಕೆಯ ಕ್ರಮವನ್ನು ಎತ್ತಿ ಹಿಡಿದಿದ್ದರು.

‘ಖಾಸಗಿ ದೂರುದಾರರು ರಾಜ್ಯಪಾಲರ ಅನುಮತಿ ಕೋರಬಹುದು. ಈ ಕುರಿತಾದ ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ’ ಎಂದು ತೀರ್ಪು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.