ADVERTISEMENT

Muda Scam | ರಾಜೀನಾಮೆ ಕೊಡಲ್ಲ: ಎಚ್‌ಡಿಕೆ ಕೊಟ್ಟರೇ- ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 15:05 IST
Last Updated 24 ಸೆಪ್ಟೆಂಬರ್ 2024, 15:05 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ನಾನು ಹೆದರಲ್ಲ. ರಾಜೀನಾಮೆ ನೀಡಲ್ಲ. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ’ ಎಂದು ಬಿಜೆಪಿ–ಜೆಡಿಎಸ್‌ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

‘ನಾನು ರಾಜೀನಾಮೆ ಕೊಡುತ್ತೇನೆಂದು ಕಾದು ಕುಳಿತಿದ್ದೀರಾ? ಯಾವ ತಪ್ಪೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರಾ? ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು’ ಎಂದರು.

‘ನಾನ್ಯಾಕೆ ರಾಜೀನಾಮೆ ಕೊಡಬೇಕು. ಎಫ್‌ಐಆರ್ ಆಗಿ ಜಾಮೀನಿನ ಮೇಲೆ ಇರುವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರೆಯೇ’ ಎಂದೂ ಪ್ರಶ್ನಿಸಿದರು.

ADVERTISEMENT

ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯವರು ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅವರನ್ನು ನಾವು ಎದುರಿಸುತ್ತೇವೆ’ ಎಂದು ಕೋಪದಿಂದಲೇ ಹೇಳಿದರು.

‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 17ಎ ಅಡಿ ತನಿಖೆ ಮಾಡಲು ಹೈಕೋರ್ಟ್‌ ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ನನ್ನ ಪ್ರಕಾರ, ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸಿದರು.

‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್ ಕಾಯ್ದೆ) 218ರ ಅಡಿ ಹೈಕೋರ್ಟ್‌ ಆದೇಶ ಮಾಡಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.  

ಕುಮಾರಸ್ವಾಮಿಗೆ ಅನ್ವಯ ಆಗುವುದಿಲ್ಲವೇ?: ‘ಮುಖ್ಯಮಂತ್ರಿ ರಾಜೀನಾಮೆ ಕೇಳುವುದಿಲ್ಲ’ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಅವರ (ಕುಮಾರಸ್ವಾಮಿ) ಮೇಲೆ ಎಫ್ಐಆರ್‌ ದಾಖಲಾಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅವರು ಸಚಿವರಾಗಿದ್ದಾರಲ್ಲವೇ? ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ನಾನು ರಾಜೀನಾಮೆ ನೀಡಬೇಕೆಂಬ ಬಿಜೆಪಿಯವರ ಬೇಡಿಕೆ ಅವರಿಗೂ ಅನ್ವಯ ಆಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ’ ಎಂದರು.

‘ನರೆಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧ ಪಕ್ಷಗಳ ವಿರುದ್ಧ ಸೇಡಿನ ರಾಜಕೀಯ ಮಾಡುತ್ತಿದೆ’ ಎಂದರು.

‘ಹೈಕೋರ್ಟ್‌ ತೀರ್ಪು ನಾನು ಪೂರ್ತಿಯಾಗಿ ಓದಿಲ್ಲ. ಮಾಧ್ಯಮಗಳಲ್ಲಿ ಬಂದಿರುವುದನ್ನು ಮಾತ್ರ ಓದಿದ್ದೇನೆ. ತೀರ್ಪು ಪೂರ್ತಿ ಓದಿದ ಬಳಿಕ ಮತ್ತೆ ಪ್ರತಿಕ್ರಿಯೆ ನೀಡುತ್ತೇನೆ’ ಎಂದೂ ಮುಖ್ಯಮಂತ್ರಿ ತಿಳಿಸಿದರು.

ನಮ್ಮ ಪಕ್ಷ ಅಥವಾ ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ದೆಹಲಿಯಿಂದ ಹಳ್ಳಿಯವರೆಗೂ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ
ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ
40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ ಎಂದು ಪದೇ ಪದೇ ಎದೆ ತಟ್ಟಿಕೊಂಡು ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಲಿ
ಆರ್‌.ಅಶೋಕ ವಿರೋಧ ಪಕ್ಷದ ನಾಯಕ ವಿಧಾನಸಭೆ
ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಒತ್ತಾಯ ಮಾಡುವುದಿಲ್ಲ. ದೇಶದ ಕಾನೂನಿನಲ್ಲಿ ರಕ್ಷಣೆ ಕೊಡಲು ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ನ್ಯಾಯಾಲಯ ತೀರ್ಪು ಕೊಡುತ್ತದೆ
ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ
ಮುಡಾ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ರಾಜ್ಯಪಾಲರ ತೇಜೋವಧೆಯಲ್ಲಿ ನಿರತರಾಗಿದ್ದರು. ಹೈಕೋರ್ಟ್‌ ತೀರ್ಪಿನಲ್ಲಿ ಸತ್ಯ ಹೊರಬಂದಿದೆ. ರಾಜೀನಾಮೆಗೆ ಇನ್ನು ತಡವೇಕೆ?
ಬಿ.ವೈ.ವಿಜಯೇಂದ್ರ ಅಧ್ಯಕ್ಷ ರಾಜ್ಯ ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.