ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಈ ಹಿಂದೆ ನೀಡಲಾಗಿದ್ದ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಗುರುವಾರಕ್ಕೆ ಮುಕ್ತಾಯವಾಗಿತ್ತು. ಹೀಗಾಗಿ ಗುರುವಾರ ಜೈಲಿನಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿತ್ತು. ಆರೋಪಿ ಪವಿತ್ರಾಗೌಡ ಅವರನ್ನು ಪ್ರತ್ಯೇಕವಾದ ಕೊಠಡಿಯಿಂದ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿಲ್ಲ. ಕೊಲೆ ಪ್ರಕರಣಗಳಲ್ಲಿ ಪೊಲೀಸರಿಗೆ ದೋಷಾರೋಪಣ ಪಟ್ಟಿ ಸಲ್ಲಿಸಲು 90 ದಿನಗಳವರೆಗೆ ಅವಕಾಶ ಇದೆ ಎಂದು ಮೂಲಗಳು ಹೇಳಿವೆ.
ದರ್ಶನ್ ಸೇರಿದಂತೆ 14 ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ರವಿಶಂಕರ್, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಅವರು ತುಮಕೂರು ಕಾರಾಗೃಹದಲ್ಲಿದ್ದಾರೆ.
ಆರೋಪಿಗಳಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಮತ್ತು ಬೆದರಿಕೆ ಹಾಕುವ ಸಾಧ್ಯತೆಯಿದೆ. ಸೆಕ್ಷನ್ 164ರ ಅಡಿ ಇನ್ನೂ ಕೆಲವರ ಹೇಳಿಕೆ ದಾಖಲು ಮಾಡಿಕೊಳ್ಳಬೇಕಿದೆ. ಹಣ ಬಲ ಹಾಗೂ ಪ್ರಭಾವವಿರುವ ಆರೋಪಿಗಳಿಗೆ ಜಾಮೀನು ನೀಡುವುದು ಸೂಕ್ತವಲ್ಲ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು ದರ್ಶನ್ ಹಾಗೂ ತಂಡಕ್ಕೆ ನ್ಯಾಯಾಂಗ ಬಂಧನ ಮುಂದುವರಿಸಲು ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.
ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿ ಇನ್ನೂ ತನಿಖಾಧಿಕಾರಿಗಳ ಕೈಸೇರಿಲ್ಲ. ಕೆಲವೇ ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.