ADVERTISEMENT

ದೇಗುಲಗಳಿಗೆ ನಿರ್ವಹಣಾ ಸಮಿತಿ ರಚನೆ ಪ್ರಶ್ನಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 16:24 IST
Last Updated 19 ಸೆಪ್ಟೆಂಬರ್ 2024, 16:24 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ‘ಬಿ’ ಮತ್ತು ‘ಸಿ’ ವರ್ಗದ ದೇವಾಲಯಗಳಿಗೆ ನಿರ್ವಹಣಾ ಸಮಿತಿ ರಚಿಸುವ ಸಂಬಂಧ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಆಯುಕ್ತರು 2016ರ ಜುಲೈ 12ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ, ‘ದೇವಸ್ಥಾನಗಳ ನಿರ್ವಹಣಾ ಸಂಘ’ದ ಟ್ಟಸ್ಟಿಯಾದ ಉಡುಪಿಯ ವೈ.ಭರತ್‌ ಹೆಗಡೆ 2016ರಲ್ಲಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಈ ಹಿಂದೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಹೊರಡಿಸಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಈಗಾಗಲೇ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ತಿದ್ದುಪಡಿ ಕಾಯ್ದೆಯಂತೆ ನಿರ್ವಹಣಾ ಸಮಿತಿಗಳನ್ನು ರಚಿಸುವ ಅಧಿಕಾರ ಸರ್ಕಾರಕ್ಕಿದೆ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿ ಆದೇಶಿಸಿತು.

ADVERTISEMENT

ಪ್ರಕರಣವೇನು?: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಕಾಯ್ದೆ–1997ರ ಕಲಂ 25ಕ್ಕೆ 2011 ಹಾಗೂ 2012ರಲ್ಲಿ ತಿದ್ದುಪಡಿ ತಂದು ನಿರ್ವಹಣಾ ಸಮಿತಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವು ದೇವಾಲಯಗಳ ಪಾರಂಪರಿಕ ಟ್ರಸ್ಟ್‌ಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತಿದ್ದುಪಡಿ ಕಾಯ್ದೆಯನ್ನು ಅನೂರ್ಜಿತಗೊಳಿಸಿ 2015ರ ನವೆಂಬರ್ 17ರಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ತೀರ್ಪಿಗೆ  2016ರ ಏಪ್ರಿಲ್ 8ರಂದು ತಡೆ ನೀಡಿತ್ತು. ತದನಂತ ಸರ್ಕಾರ ತಿದ್ದುಪಡಿ ಕಾಯ್ದೆಗೆ ಅನುಗುಣವಾಗಿ ‘ಬಿ’ ಮತ್ತು ‘ಸಿ’ ದೇವಸ್ಥಾನಗಳಿಗೆ ನಿರ್ವಹಣಾ ಸಮಿತಿಗಳನ್ನು ರಚಿಸುವ ನಿಟ್ಟಿನಲ್ಲಿ 2016ರ ಜುಲೈ 12ರಂದು ಅಧಿಸೂಚನೆ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.