ಬೆಂಗಳೂರು: ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಮುಂದಿನ ವಾರ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ಅವಧಿ ಮುಕ್ತಾಯಗೊಂಡ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ಅಧಿಸೂಚನೆ ಹೊರಡಿಸದೇ ಇದ್ದರೆ, ಹಿಂದಿನ ಚುನಾವಣೆಯಲ್ಲಿ ನಿಗದಿ ಮಾಡಲಾಗಿದ್ದ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ಅನ್ವಯವೇ ಚುನಾವಣೆ ನಡೆಸಬಹುದು. ಅವಧಿ ಮುಗಿದ ಮೂರು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಸಿದ್ಧವಾಗಿದ್ದು, ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.
₹2,100 ಕೋಟಿ ಅನುದಾನ ಖೋತಾ
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ವಿಂಗಡಣೆ ಮಾಡಿ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಮೀಸಲಾತಿ ಪ್ರಕಟಿಸುವುದು ಬಾಕಿ ಇದೆ. ಕೋರ್ಟ್ ಸೂಚನೆಯ ನಂತರವೂ ಮೀಸಲಾತಿ ಪ್ರಕಟಿಸಿದ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಇದೇ ಆ.12ರಂದು ವಿಚಾರಣೆ ಇದೆ. ತೀರ್ಪು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಡಿಸೆಂಬರ್ ಒಳಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.
ಮಾರ್ಚ್ 31ರ ಒಳಗೆ ಚುನಾವಣೆ ನಡೆಸಿ, ಫಲಿತಾಂಶದ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದೆ ಇದ್ದರೆ ತಡೆ ಹಿಡಿದಿರುವ 15ನೇ ಹಣಕಾಸು ಆಯೋಗದ ₹2,100 ಕೋಟಿ ಅನುದಾನ ಸಿಗುವುದಿಲ್ಲ. ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.