ADVERTISEMENT

ಆದಿಚುಂಚನಗಿರಿ ಶ್ರೀಗಳ ಆಗ್ರಹವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಮೇ 2022, 6:51 IST
Last Updated 29 ಮೇ 2022, 6:51 IST
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ   

ಬೆಂಗಳೂರು:ಕುವೆಂಪು ಅವರು ರಚಿಸಿರುವ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ನಿರ್ಮಲಾನಂದನಾಥ ಶ್ರೀಗಳ ಆಗ್ರಹವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಕ್ಷಣ ಸಚಿವರ ಜತೆ ಚರ್ಚಿಸಿದ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಷ್ಟ್ರ ಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆ ತಿರುಚಿ ಬರೆದಿರುವವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದ್ದರು.

ADVERTISEMENT

ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎನ್ನುವ ಸಂದೇಶ ರವಾನಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದರು.

ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರ ಮೇಲೆ ರಾಷ್ಟ್ರ ಕವಿ ಕುವೆಂಪು ಹಾಗೂ ನಾಡಗೀತೆಗೆ ಅವಮಾನ ಮಾಡಿದ ಆರೋಪವಿದೆ.

ಇನ್ನೂ ತೀರ್ಮಾನವಾಗಿಲ್ಲ: ರಾಜ್ಯಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.