ADVERTISEMENT

ಮೋದಿಯ ರೈತ ವಿರೋಧಿ ನಿಲುವಿಗೆ ದೇವೇಗೌಡರ ಮೌನವೇಕೆ? –ಕೃಷಿ ಸಚಿವ ಚಲುವರಾಯಸ್ವಾಮಿ

‘ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಸಿಗಲಿ‘

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 11:20 IST
Last Updated 22 ನವೆಂಬರ್ 2024, 11:20 IST
<div class="paragraphs"><p>ಕೃಷಿ ಸಚಿವ ಚಲುವರಾಯಸ್ವಾಮಿ,&nbsp;ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ</p></div>

ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

   

ಮಂಡ್ಯ: ‘ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಸಹಕಾರ ಸಂಘಗಳಿಗೆ ನೀಡಲಾಗುವ ಸಾಲದ ಮೊತ್ತವನ್ನು ನಬಾರ್ಡ್ ಬ್ಯಾಂಕ್ ಕಡಿತಗೊಳಿಸಿರುವುದು ರೈತ ವಿರೋಧಿ ನಿಲುವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೌನ ವಹಿಸಿರುವುದು ಸರಿಯಲ್ಲ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ‘ಆರ್.ಬಿ.ಐ ಮೂಲಕ ನಬಾರ್ಡ್‌ಗೆ ಹೆಚ್ಚು ಹಣ ನೀಡಿ, ರಾಷ್ಟ್ರದ ರೈತರಿಗೆ ನೆರವಾಗಬೇಕಿದ್ದ ಕೇಂದ್ರ ಸರ್ಕಾರ ಸಾಲದ ಮೊತ್ತವನ್ನು ಶೇ 50ರಷ್ಟು ಕಡಿತಗೊಳಿಸಿ ರೈತವಿರೋಧಿ ನಿಲುವು ತಾಳಿದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ವಿರುದ್ದ ಹೋರಾಟ ನಡೆಸಿದ್ದ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ರೈತ ವಿರೋಧಿ ನಿಲುವಿನ ಬಗ್ಗೆ ಏಕೆ ಮೌನ ವಹಿಸಿದ್ದಾರೆ? ಈ ಬಗ್ಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೌನವಾಗಿರುವ ಗುಟ್ಟೇನು? ಎಂದು ಹರಿಹಾಯ್ದರು.

ADVERTISEMENT

ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಬೆಳೆ ಸಾಲ ಬಿಡುಗಡೆಯಾಗಿತ್ತು. ಆದರೆ ಈ ಬಾರಿ ₹2,340 ಕೋಟಿ ಬಿಡುಗಡೆಗೊಳಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದರು.

ಉಪಚುನಾವಣೆಯಲ್ಲಿ ‘ಕೈ’ ಮೇಲುಗೈ

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ನೆರವಾಗಲಿದ್ದು, ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಜಯಗಳಿಸುವುದು ಖಾತ್ರಿಯಾಗಿದ್ದು, ಶಿಗ್ಗಾವಿ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇದೆ ಎಂದು ತಿಳಿಸಿದರು.

ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಸಿಗಲಿ
ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಪಕ್ಷದಲ್ಲಿ ಹಿರಿತನ ಪರಿಗಣಿಸಿ, ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯಕ್ಕೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ನಮ್ಮೆಲ್ಲರ ಒಕ್ಕೊರಲ ಆಗ್ರಹವಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನರೇಂದ್ರಸ್ವಾಮಿ ನೋವಿನಲ್ಲಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಪಕ್ಷ ಅಧಿಕಾರಕ್ಕೆ ಬಂದ ವೇಳೆಯಲ್ಲಿ ಹೈಕಮಾಂಡ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನೀಡಿರುವ ಭರವಸೆಯನ್ನು ಕಾರಣಾಂತರದಿಂದ ಈಡೇರಿಸಲು ಸಾಧ್ಯವಾಗಿಲ್ಲ. ಅದು ಮುಂದಿನ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ವೇಳೆ ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಒಲಿಯುವ ವಿಶ್ವಾಸವಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.