ADVERTISEMENT

ಜೂನ್ 27ರಂದು ರಾಜ್ಯವ್ಯಾಪಿ ಕೆಂಪೇಗೌಡರ ಜಯಂತಿ ಆಚರಣೆ: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 23:30 IST
Last Updated 18 ಜೂನ್ 2024, 23:30 IST
<div class="paragraphs"><p>ಡಿ.ಕೆ.ಶಿವಕುಮಾರ್‌</p></div>

ಡಿ.ಕೆ.ಶಿವಕುಮಾರ್‌

   

ಬೆಂಗಳೂರು: ರಾಜ್ಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು ತಲಾ ₹1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಂಪೇಗೌಡರ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲಾ ₹1 ಲಕ್ಷ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ADVERTISEMENT

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ₹20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ ₹20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ ₹1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ ₹50 ಸಾವಿರ ನೀಡಲಾಗುತ್ತಿದ್ದು, ಮೊತ್ತ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು. 

ಕೆಂಪೇಗೌಡರ 515 ನೇ ಜಯಂತಿಯನ್ನು ಇದೇ 27 ರಂದು ಅರಮನೆ ಮೈದಾನ ಅಥವಾ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿ ವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತವೆ ಎಂದರು.

ವಿಧಾನಪರಿಷತ್‌ನ ಮಾಜಿ ಸಭಾಪತಿ ಬಿ.ಎಲ್‌.ಶಂಕರ್ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಪ್ರಶಸ್ತಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದರು.

ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ಧಿಪಡಿಸುವ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ದೇವನಹಳ್ಳಿ ಕ್ಷೇತ್ರದಲ್ಲಿ ಕೆಂಪೇಗೌಡ ಜನ್ಮಸ್ಥಳ ಅಭಿವೃದ್ಧಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯ ದಿನವೇ ಗುದ್ದಲಿಪೂಜೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.