ADVERTISEMENT

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ ಸ್ಪಷ್ಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜೂನ್ 2023, 9:35 IST
Last Updated 30 ಜೂನ್ 2023, 9:35 IST
ನಾಗತಿಹಳ್ಳಿ ಚಂದ್ರಶೇಖರ
ನಾಗತಿಹಳ್ಳಿ ಚಂದ್ರಶೇಖರ   

ಬೆಂಗಳೂರು: ಆರ್‌ಎಸ್‌ಎಸ್‌ನ ಗುರುಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಬೆಂಗಳೂರಿನ ಶಂಕರಪುರ ಭಾಗವು ಜುಲೈ 16 ರಂದು ‘ಶ್ರೀ ಗುರುಪೂಜಾ ಉತ್ಸವ‘ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಣವಾಗಿತ್ತು.

ಚಂದ್ರಶೇಖರ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೂ ಕಾರಣವಾಗಿತ್ತು.

ADVERTISEMENT

ವ್ಯಾಪಕ ಟೀಕೆ ಎದುರಾಗಿರುವ ಬೆನ್ನಲ್ಲೇ, ಕಾರ್ಯಕ್ರಮದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಚಂದ್ರಶೇಖರ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ‘ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ.ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ.ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ‘ ಎಂದು ಹೇಳಿದ್ದಾರೆ.

‘ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ,ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ.ಅದನ್ನೇ ಮುಂದುವರೆಸುತ್ತೇನೆ‘ ಎಂದು ಅವರು ತಿಳಿಸಿದ್ದಾರೆ.

‘ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು‘ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.