ADVERTISEMENT

ಜಾಮೀನು ರದ್ದು ಕೋರಿ ಇ.ಡಿ ಅರ್ಜಿ: ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 15:45 IST
Last Updated 24 ಅಕ್ಟೋಬರ್ 2024, 15:45 IST
<div class="paragraphs"><p>ಬಿ ನಾಗೇಂದ್ರ</p></div>

ಬಿ ನಾಗೇಂದ್ರ

   

ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ವರ್ಗಾವಣೆ ಮಾಡಲಾಗಿದೆ’ ಎಂಬ ಪ್ರಕರಣದಲ್ಲಿ; ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ರದ್ದುಪಡಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ನಾಗೇಂದ್ರ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಇ.ಡಿ ಪರ ಖುದ್ದು ಹಾಜರಾಗಿದ್ದ ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ‘ಈ ಪ್ರಕರಣದಲ್ಲಿ ನಾಗೇಂದ್ರ ಅವರು ಬಹುಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಇ.ಡಿ ಸಾಕಷ್ಟು ಸಾಕ್ಷ್ಯಗಳನ್ನು ತನಿಖೆಯ ವೇಳೆ ಪತ್ತೆ ಮಾಡಿದೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ (ಪಿಎಂಎಲ್ಎ) ಕಲಂ 45ರ ಅನುಸಾರ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ. ಹಾಗಾಗಿ, ನಾಗೇಂದ್ರ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ನಾಗೇಂದ್ರ ಅವರಿಗೆ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿತು. ಇ.ಡಿ ಪರ ಹೈಕೋರ್ಟ್‌ ವಕೀಲ ಪಿ.ಪ್ರಸನ್ನ ಕುಮಾರ್ ಹಾಜರಿದ್ದರು.

ಈ ಪ್ರಕರಣದಲ್ಲಿ ನಾಗೇಂದ್ರ ಮೊದಲ ಆರೋಪಿಯಾಗಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಇದೇ 10ರಂದು ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ನೀಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.