ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ನಡೆಯನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ.
‘ನಮ್ಮ ವಕೀಲರ ಜೊತೆ ಖಾಸಗಿಯಾಗಿ ಮಾತನಾಡಲು ಇಡಿ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಆದ್ದರಿಂದ, ವಕೀಲರ ಭೇಟಿ ವೇಳೆ ಖಾಸಗಿಯಾಗಿ ಮಾತನಾಡಲು ಅನುವು ಮಾಡಿಕೊಡುವಂತೆ ನೀಡುವಂತೆ ನಿರ್ದೇಶಿಸಬೇಕು’ ಎಂದು ನಾಗೇಂದ್ರ ಅರ್ಜಿಯಲ್ಲಿ ಕೋರಿದ್ದಾರೆ.
ನಾಗೇಂದ್ರ ಪರ ವಕೀಲ ಶಾಮ್ ಸುಂದರ್ ಅವರು ಸೋಮವಾರ ಈ ಅರ್ಜಿ ಸಲ್ಲಿಸಿದ್ದು, ‘ಇ.ಡಿ ಅಧಿಕಾರಿಗಳು ತಮಗೆ ಬೇಕಾದಂತೆ ಹೇಳಿಕೆ ನೀಡುವಂತೆ ಹಾಗೂ ಬೇರೆ ಬೇರೆ ಹೆಸರುಗಳನ್ನು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಇಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
‘ನಾಗೇಂದ್ರ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇದೆ. ಆದರೆ, ಚರ್ಮತಜ್ಞರಿಂದ ಚಿಕಿತ್ಸೆ ಕೊಡಲಾಗುತ್ತಿದ್ದು, ಅವರಿಗೆ ವೈದ್ಯಕೀಯ ನೆರವಿನ ಅಗತ್ಯವಿದೆ’ ಎಂದು ವಿವರಿಸಿದರು.
ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 16) ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.