ಬೆಂಗಳೂರು: ‘ನಾನಿದ್ದ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ಬಳಿಕ ಎನ್‌ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ಆಗಿರಲಿಲ್ಲ. ಹೀಗಾಗಿ ಸ್ವಯಂಪ್ರೇರಿತವಾಗಿ, ಬೇಷರತ್ ಆಗಿ ಕಾಂಗ್ರೆಸ್ ಪಕ್ಷ ಸೇರಿದ್ದೇನೆ’ ಎಂದು ಸಿ.ಪಿ. ಯೋಗೇಶ್ವರ ಸಮರ್ಥನೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಬಳಿಕ ಮಾತನಾಡಿದ ಅವರು, ‘ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ’ ಎಂದರು.
‘ನನ್ನ ರಾಜಕೀಯ ಜೀವನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಆರಂಭಿಸಿದ್ದೆ. ಈಗ ಮತ್ತೆ ಬಂದಿದ್ದೇನೆ. ಡಿ.ಕೆ. ಸುರೇಶ್ ಅವರ 2–3 ಗೆಲುವಿನಲ್ಲಿ ನನ್ನ ಪಾತ್ರವೂ ಇದೆ. ಒಂದು ಬಾರಿ ಅವರ ಸೋಲಿನಲ್ಲೂ ನನ್ನ ಪಾತ್ರವಿದೆ. ರಾಜಕಾರಣದಲ್ಲಿ ಏರಿಳಿತಗಳು ಇರುತ್ತವೆ. ಪಕ್ಷ ಬಿಟ್ಟ ನಂತರ ಅನೇಕ ಟೀಕೆ ಟಿಪ್ಪಣಿ ಬರುತ್ತವೆ. ನಾನದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ’ ಎಂದರು.
‘ಕ್ಷೇತ್ರ ಅಭಿವೃದ್ಧಿ ಮಾಡುವುದು ನಮ್ಮ ಗುರಿ. ಡಿ.ಕೆ. ಶಿವಕುಮಾರ್ ಮತ್ತು ರಾಮಲಿಂಗಾ ರೆಡ್ಡಿ ಅವರು ಕಳೆದ ಮೂರ್ನಾಲ್ಕು ತಿಂಗಳಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಅಭಿವೃದ್ಧಿ ಚಟುವಟಿಕೆಯಲ್ಲಿ ನಾನೂ ಪಾಲುದಾರನಾಗಬೇಕು. ಸರ್ಕಾರದ ಜತೆ ಕೈಜೋಡಿಸಿ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಬೇಕೆಂದು ಈ ತೀರ್ಮಾನ ಮಾಡಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.